Mon. Dec 23rd, 2024

ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದು: ಸಿಎಂ ಸಂತಸ

Share this with Friends

ಮೈಸೂರು: ಹಿಂದೆ ಇಡೀ ಮಹಿಳಾ ಕುಲವನ್ನು ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು,ಆದರೆ
ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು.

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ನಾವು ಜಾರಿಗೆ ತಂದಿದ್ದೇವೆ, ನೀವು ವಿದ್ಯಾರ್ಥಿನಿಯರು ಬಸ್ ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದೀರಿ ತಾನೇ ಎಂದು ಪ್ರಶ್ನಿಸಿದರು. ಅದಕ್ಕೆ ವಿದ್ಯಾರ್ಥಿನಿಯರು ಹೌದು ಎಂದು ಹೇಳಿ ಎರಡೂ ಕೈಗಳನ್ನು ಎತ್ತಿ ಹರ್ಷೋದ್ಗಾರ ಮಾಡಿದರು.

ಇಲ್ಲಿಯವರೆಗೂ 325 ಕೋಟಿ ಫ್ರೀ ಟಿಕೆಟ್ ಮೂಲಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಮಹಿಳೆಯರು, ಯುವತಿಯರು ಸ್ವಾವಲಂಬಿಗಳಾಗಲು ಸಾಧ್ಯ ಎಂದು ಹೇಳಿದರು.

ಮಹಿಳೆಯರಿಗೆ ಮೊದಲಿಗೆ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದು ಬಸವಣ್ಣನರು, ಶಿಕ್ಷಣ ಮಹಿಳೆಯರ ಹಕ್ಕಾಗಿಸಿದ್ದು ಡಾ.ಬಿ.ಆರ್.ಅಂಬೇಡ್ಕರ್ ಅವರು. ಆದ್ದರಿಂದ ನೀವೆಲ್ಲಾ ಜಾತ್ಯತೀತರಾಗಿ, ವಿಶ್ವ ಮಾನವರಾಗಿ ಬೆಳೆದು ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್, ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಡಾ.ತಿಮ್ಮಯ್ಯ, ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಹಾಜರಿದ್ದರು.


Share this with Friends

Related Post