Fri. Jun 5th, 2026

ಪಕ್ಷ ವಿರೋಧಿ ಚಟುವಟಿಕೆ ಆರೋಪ: ನಜೀರ್ ಅಹಮದ್‌ಗೆ ಸಿಎಂ ಸಿದ್ದರಾಮಯ್ಯ ಕೊಕ್

Share this with Friends

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ನಜೀರ್ ಅಹಮದ್ ಅವರನ್ನು ಆ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಉಪಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರ ಪರವಾಗಿ ಪ್ರಚಾರ ನಡೆಸದೆ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ದೂರುಗಳು ಹೈಕಮಾಂಡ್ ತಲುಪಿದ್ದವು. ಈ ಹಿನ್ನೆಲೆಯಲ್ಲಿ ಎಐಸಿಸಿ ಸೂಚನೆಯಂತೆ ನಜೀರ್ ಅಹಮದ್ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿತ್ತು. ಆದರೆ, ಅವರು ರಾಜೀನಾಮೆ ನೀಡಲು ವಿಳಂಬ ಮಾಡಿದ ಕಾರಣ, ಸರ್ಕಾರವೇ ನೇರವಾಗಿ ಅವರನ್ನು ಸೇವೆಯಿಂದ ಮುಕ್ತಗೊಳಿಸಿ ಅಧಿಸೂಚನೆ ಹೊರಡಿಸಿದೆ.

ಅಸಮಾಧಾನಕ್ಕೆ ಕಾರಣ:

ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯವಿತ್ತು. ಆದರೆ ಪಕ್ಷವು ಶಾಮನೂರು ಕುಟುಂಬದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಕ್ಕೆ ನಜೀರ್ ಅಹಮದ್ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರು ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದರು ಎನ್ನಲಾಗುತ್ತಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (DPAR) ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ನಜೀರ್ ಅಹಮದ್ ಅವರಿಗೆ ನೀಡಲಾಗಿದ್ದ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ಸೌಲಭ್ಯಗಳು ಈಗ ರದ್ದಾಗಿವೆ.

 


Share this with Friends

Related Post