ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಕೃಷಿ ಹಂಗಾಮು ಹಾಗೂ ಬೇಸಿಗೆಯ ತೀವ್ರತೆಯನ್ನು ಎದುರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಡಳಿತಕ್ಕೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ರಸಗೊಬ್ಬರ ಪೂರೈಕೆ ಮತ್ತು ಜಾನುವಾರುಗಳ ಮೇವಿನ ನಿರ್ವಹಣೆಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ರಸಗೊಬ್ಬರ ಪೂರೈಕೆ ಹಾಗೂ ಅಕ್ರಮಕ್ಕೆ ಬ್ರೇಕ್:
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯು ರಸಗೊಬ್ಬರ ಆಮದಿನ ಮೇಲೆ ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿದ ಸಿಎಂ, ರಾಜ್ಯದ ರೈತರಿಗೆ ರಸಗೊಬ್ಬರದ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ತಿಳಿಸಿದರು. ಹಾವೇರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಮಾರಾಟವಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಇದರ ಹಿಂದಿನ ಕಾರಣಗಳನ್ನು ಪತ್ತೆಹಚ್ಚಲು ಅಧಿಕಾರಿಗಳಿಗೆ ಸೂಚಿಸಿದರು. ವ್ಯಾಪಾರಿಗಳು ರಸಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕಾಳಸಂತೆ ಸೃಷ್ಟಿಸುವುದನ್ನು ತಡೆಯಲು ಮತ್ತು ರಾಜ್ಯದ ರಸಗೊಬ್ಬರ ನೆರೆ ರಾಜ್ಯಗಳಿಗೆ ಅಕ್ರಮವಾಗಿ ಸಾಗಾಟವಾಗುವುದನ್ನು ನಿಯಂತ್ರಿಸಲು ಗಡಿ ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲು ಆದೇಶಿಸಿದರು. ಅರ್ಹ ರೈತರಿಗೆ ಸಕಾಲದಲ್ಲಿ ಯೂರಿಯಾ ಮತ್ತು ಡಿಎಪಿ ವಿತರಣೆಯಾಗುವುದನ್ನು ಜಿಲ್ಲಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಅವರು ತಾಕೀತು ಮಾಡಿದರು.
ಮೇವೂ ನಿರ್ವಹಣೆ ಮತ್ತು ಮುನ್ನೆಚ್ಚರಿಕೆ:
ಜಾನುವಾರುಗಳ ಮೇವಿನ ಲಭ್ಯತೆಯ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವುದರಿಂದ ಸದ್ಯಕ್ಕೆ ಮೇವಿನ ಕೊರತೆಯಿಲ್ಲ ಎಂದು ತಿಳಿಸಿದರು. ಆದರೆ, ಈ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು ಎಂದು ಎಚ್ಚರಿಸಿದರು. ಮಳೆಗಾಲ ವಿಳಂಬವಾಗುವ ಸಾಧ್ಯತೆ ಇರುವುದರಿಂದ, ಜಿಲ್ಲಾಧಿಕಾರಿಗಳು ಪ್ರತಿ ತಾಲೂಕು ಮಟ್ಟದಲ್ಲಿ ಮೇವಿನ ದಾಸ್ತಾನು ಪ್ರಮಾಣವನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು. ಒಂದು ವೇಳೆ ಮೇವಿನ ಅಭಾವ ಉಂಟಾದಲ್ಲಿ ತಕ್ಷಣವೇ ಮೇವು ಬ್ಯಾಂಕ್‌ಗಳನ್ನು ಆರಂಭಿಸಲು ಹಾಗೂ ಗೋಶಾಲೆಗಳ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಲು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. “ರೈತರ ಮತ್ತು ಜನಸಾಮಾನ್ಯರ ಹಿತರಕ್ಷಣೆಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಯಾವುದೇ ಹಂತದಲ್ಲಿ ಕರ್ತವ್ಯ ಲೋಪವಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಈ ಸಂದರ್ಭದಲ್ಲಿ ಎಚ್ಚರಿಸಿದರು.

