ಬೆಂಗಳೂರು: ರಾಜ್ಯದ ಪರಿಶಿಷ್ಟ ಪಂಗಡಗಳ (ST) ಸಮಗ್ರ ಏಳಿಗೆಗಾಗಿ 2026-27ನೇ ಸಾಲಿನ ಆಯವ್ಯಯದಲ್ಲಿ ವಿಶೇಷ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಆಡಳಿತ ಪಕ್ಷದ ಎಸ್.ಟಿ ಸಮುದಾಯದ ಶಾಸಕರು ಹಾಗೂ ಮುಖಂಡರ ಬಜೆಟ್ ಪೂರ್ವ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮುದಾಯದ ನಾಯಕರಿಂದ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಿದ ಸಿಎಂ, ಅನುಷ್ಠಾನಗೊಳಿಸಬಹುದಾದ ಎಲ್ಲಾ ಪ್ರಮುಖ ಬೇಡಿಕೆಗಳಿಗೆ ಬಜೆಟ್ನಲ್ಲಿ ಪೂರಕ ಅನುದಾನ ಮೀಸಲಿಡುವುದಾಗಿ ಭರವಸೆ ನೀಡಿದರು.
“ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ತಲುಪಬೇಕು ಎಂಬುದು ನಮ್ಮ ಆಶಯ. ಸಮುದಾಯದ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಗೆ ಪೂರಕವಾಗುವಂತಹ ಯೋಜನೆಗಳನ್ನು ಮುಂಬರುವ ಬಜೆಟ್ನಲ್ಲಿ ರೂಪಿಸಲಾಗುವುದು” ಎಂದು ಅವರು ತಿಳಿಸಿದರು.
ಅಧಿಕಾರಿಗಳೊಂದಿಗೆ ಸಮಾಲೋಚನೆ:
ಸಭೆಯಲ್ಲಿ ಉಪಸ್ಥಿತರಿದ್ದ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಮುದಾಯದ ಬೇಡಿಕೆಗಳ ಕುರಿತು ರೂಪುರೇಷೆ ಸಿದ್ಧಪಡಿಸಲು ಸೂಚಿಸಲಾಯಿತು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಬಜೆಟ್ನಲ್ಲಿ ಒತ್ತು:
ಹಿಂದುಳಿದ ವರ್ಗಗಳ ಸಮಗ್ರ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಾಗಿ 2026-27ನೇ ಸಾಲಿನ ಆಯವ್ಯಯದಲ್ಲಿ ಅಗತ್ಯ ಅನುದಾನ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಆಡಳಿತ ಪಕ್ಷದ ಹಿಂದುಳಿದ ವರ್ಗಗಳ ಶಾಸಕರು ಹಾಗೂ ಸಮುದಾಯದ ಪ್ರಮುಖ ಮುಖಂಡರ ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಸಮುದಾಯದ ಶಾಸಕರು ಸಲ್ಲಿಸಿದ ವಿವಿಧ ಬೇಡಿಕೆಗಳನ್ನು ಸ್ವೀಕರಿಸಿದ ಸಿಎಂ, “ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಸಭೆಯಲ್ಲಿ ಮಂಡನೆಯಾದ ಪ್ರಸ್ತಾವನೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಮುಂಬರುವ ಬಜೆಟ್ನಲ್ಲಿ ಸೂಕ್ತ ಹಣಕಾಸು ನೆರವು ನೀಡಲಾಗುವುದು,” ಎಂದು ಆಶ್ವಾಸನೆ ನೀಡಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ ಸಚಿವರು ಹಾಗೂ ಶಾಸಕರು ಸಮುದಾಯದ ಪ್ರಸ್ತುತ ಸ್ಥಿತಿಗತಿ ಮತ್ತು ಅಗತ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದರು. ಸಮಾಜದ ಈ ವರ್ಗಗಳ ಶೈಕ್ಷಣಿಕ ಮತ್ತು ಉದ್ಯೋಗದ ಪ್ರಗತಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ಮಾಡಿದರು.
ಈ ಪ್ರಮುಖ ಸಭೆಯಲ್ಲಿ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದು, ವಿವಿಧ ಯೋಜನೆಗಳ ಅನುಷ್ಠಾನದ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲಾಯಿತು