Wed. Mar 11th, 2026

ಶಾಸಕಾಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ: ಅಧಿವೇಶನಕ್ಕೆ ಗೈರಾದ್ರೆ ಹುಷಾರ್!

Share this with Friends

ಬೆಂಗಳೂರು: ಬಜೆಟ್ ಅಧಿವೇಶನಕ್ಕೆ ಗೈರಾಗುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಶಾಸಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಅಧಿವೇಶನದ ಅವಧಿಯಲ್ಲಿ ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಹಾಗೂ ಚರ್ಚೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನಿರ್ದೇಶನ ನೀಡಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಬಜೆಟ್ ಮಂಡನೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಸಿದರು.ಜನರ ಆಶೀರ್ವಾದ, ನಮ್ಮ ಪಕ್ಷದ ಶಾಸಕರ ಬೆಂಬಲದಿಂದ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ, ನನ್ನ ರಾಜಕೀಯ ಜೀವನದ ದಾಖಲೆಯ 17ನೇ ಬಜೆಟ್ ಮಂಡಿಸಲು ಸಾಧ್ಯವಾಗಿದೆ. ಇದಕ್ಕಾಗಿ ರಾಜ್ಯದ ಜನತೆಗೆ, ಪಕ್ಷದ ವರಿಷ್ಠರಿಗೆ ಹಾಗೂ ಶಾಸಕರಿಗೆ ನಾನು ಆಭಾರಿ.ಸರ್ವರನ್ನೂ ಒಳಗೊಳ್ಳುವ, ಸರ್ವತೋಮುಖ ಪ್ರಗತಿಯ ಜನಪರವಾದ ಬಜೆಟ್ ಮಂಡಿಸಿದ ನನ್ನನ್ನು ಇಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ನಮ್ಮೆಲ್ಲಾ ಶಾಸಕರುಗಳು ಅಭಿನಂದಿಸಿದರು. ನಿಮ್ಮೆಲ್ಲರ ಪ್ರೀತಿ ಬೆಂಬಲಕ್ಕೆ ಧನ್ಯವಾದಗಳು ಎಂದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿ.ಕೆ.ಶಿವಕುಮಾರ್ ಅವರನ್ನು ಪಕ್ಷದ ಶಾಸಕರ ಪರವಾಗಿ ಅಭಿನಂದಿಸಿ, ಶುಭ ಹಾರೈಸಿದರು.

ಸಭೆಯ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ:

ಸರ್ವವ್ಯಾಪಿ ಬಜೆಟ್: ಈ ಬಾರಿಯ ಬಜೆಟ್ ಅತ್ಯಂತ ಸಮತೋಲಿತವಾಗಿ ಮೂಡಿಬಂದಿದೆ. ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಮಟ್ಟದ ಅನುದಾನ ಸಿಗದಿದ್ದರೂ ಸಹ, ರಾಜ್ಯದ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಲಾಗಿದೆ. ಕಳೆದ ಬಾರಿಗಿಂತಲೂ ಹೆಚ್ಚಿನ ಅನುದಾನವನ್ನು ಎಲ್ಲಾ ಇಲಾಖೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಸಿಎಂ ವಿವರಿಸಿದರು.

ಕಡ್ಡಾಯ ಹಾಜರಾತಿ: ಉಭಯ ಸದನಗಳ ಕಲಾಪ ನಡೆಯುವಾಗ ಸಚಿವರು ಕಡ್ಡಾಯವಾಗಿ ಹಾಜರಿರಬೇಕು. ಸರ್ಕಾರದ ಪರವಾಗಿ ಸಮರ್ಥವಾಗಿ ಉತ್ತರ ನೀಡಲು ಸಚಿವರು ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು.

ಸಕ್ರಿಯ ಭಾಗಿತ್ವ: ಕೇವಲ ಸಚಿವರಷ್ಟೇ ಅಲ್ಲದೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಶೂನ್ಯವೇಳೆ ಹಾಗೂ ಪ್ರಶ್ನೋತ್ತರ ಅವಧಿಯಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಶಾಸಕರಿಗೆ ತಿಳಿಸಿದರು.

ಶಿಸ್ತು ಕ್ರಮದ ಎಚ್ಚರಿಕೆ: ಸದನದಲ್ಲಿ ಆಡಳಿತ ಪಕ್ಷದ ಸದಸ್ಯರ ಅನುಪಸ್ಥಿತಿ ಎದ್ದು ಕಾಣುವಂತಾಗಬಾರದು. ವಿಪಕ್ಷಗಳ ಟೀಕೆಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಶಾಸಕರು ಸದನದಲ್ಲಿ ಹಾಜರಿರುವುದು ಅನಿವಾರ್ಯ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಒತ್ತಿ ಹೇಳಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಬಜೆಟ್ ಕಾರ್ಯಕ್ರಮಗಳ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವಂತೆ ಶಾಸಕರಿಗೆ ಇದೇ ವೇಳೆ ನಿರ್ದೇಶನ ನೀಡಿದರು.

 


Share this with Friends

Related Post