Sun. Jun 28th, 2026

ಅಮಲು ಪದಾರ್ಥ ಬೆರಕೆಯಾದರೆ ಗುಟ್ಕಾ, ಪಾನ್ ಮಸಾಲಾ ಸಂಪೂರ್ಣ ನಿಷೇಧ: ಸಿಎಂ ಎಚ್ಚರಿಕೆ

Share this with Friends

ಬೆಂಗಳೂರು: ಪಾನ್ ಮಸಾಲಾ ಹಾಗೂ ಗುಟ್ಕಾ ಪದಾರ್ಥಗಳಲ್ಲಿ ಕಿಂಚಿತ್ತೂ ನಶೆ ತರುವ ವಸ್ತುಗಳನ್ನು ಮಿಶ್ರಣ ಮಾಡಿ ಮಾರಾಟ ಮಾಡುವುದು ಕಂಡುಬಂದರೆ, ರಾಜ್ಯದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ ಮತ್ತು ಗುಟ್ಕಾ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ‘ನಶಾ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವ ಪೀಳಿಗೆಯ ರಕ್ಷಣೆ ನಮ್ಮ ಜವಾಬ್ದಾರಿ

ಕೆಲವು ಪಾನ್ ಮಸಾಲಾ ಮತ್ತು ಅಡಿಕೆ ಪದಾರ್ಥಗಳಲ್ಲಿ ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ದಂಧೆ ತಕ್ಷಣ ನಿಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಎಚ್ಚರಿಸಿದ ಅವರು, “ಮಾದಕದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವುದು ನಮ್ಮ ಪ್ರಮುಖ ಗುರಿಯಾಗಿದೆ. ಯುವ ಪೀಳಿಗೆ ಈ ವ್ಯಸನದ ಸುಳಿಗೆ ಸಿಲುಕದಂತೆ ತಡೆಯಲು ನಾವೆಲ್ಲರೂ ರಾಯಭಾರಿಗಳಾಗಿ ಒಟ್ಟಾಗಿ ಕೆಲಸ ಮಾಡಬೇಕಿದೆ” ಎಂದು ಕರೆ ನೀಡಿದರು. ಜೀವ ರಕ್ಷಿಸುವ ವೈದ್ಯಕೀಯ ವೃತ್ತಿಯನ್ನು ಆಯ್ದುಕೊಂಡ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಶ್ಲಾಘಿಸಲಾಯಿತು.

ದೇಶದ ವೈದ್ಯಕೀಯ ರಾಜಧಾನಿ ಕರ್ನಾಟಕ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಆರಂಭಿಸಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರಿಗೆ ಧನ್ಯವಾದ ಅರ್ಪಿಸಿದ ಸಿಎಂ, ಈ ವಿವಿಯು ದೇಶದಲ್ಲೇ ಅತಿ ಹೆಚ್ಚು ವೈದ್ಯರನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದೆ ಎಂದರು. ರಾಜ್ಯದಲ್ಲಿ ಸದ್ಯ 70 ವೈದ್ಯಕೀಯ ಕಾಲೇಜುಗಳಿದ್ದು, ದೇಶದ ಬೇರೆ ಯಾವುದೇ ರಾಜ್ಯದಲ್ಲೂ ಇಷ್ಟೊಂದು ಸಂಖ್ಯೆಯ ಮೆಡಿಕಲ್ ಕಾಲೇಜುಗಳಿಲ್ಲ. ಹೀಗಾಗಿ ಕರ್ನಾಟಕವು ದೇಶದ ವೈದ್ಯಕೀಯ ರಾಜಧಾನಿಯಾಗಿದೆ ಎಂದು ಹೆಮ್ಮೆಯಿಂದ ತಿಳಿಸಿದರು.

ಬೆಂಗಳೂರಿನ ಅತ್ಯುತ್ತಮ ಹವಾಮಾನ ಹಾಗೂ ಇಲ್ಲಿರುವ ಆಸ್ಪತ್ರೆಗಳ ಸೌಲಭ್ಯವನ್ನು ಶ್ಲಾಘಿಸಿದ ಅವರು, ರಾಜೀವ್ ಗಾಂಧಿ ವಿಶ್ವವಿದ್ಯಾಲಯವು ಶೀಘ್ರದಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆಯ ನೂತನ ಸುಸಜ್ಜಿತ ಕ್ಯಾಂಪಸ್‌ಗೆ ಸ್ಥಳಾಂತರಗೊಳ್ಳಲಿದೆ ಎಂಬ ಪ್ರಮುಖ ಮಾಹಿತಿಯನ್ನು ಹಂಚಿಕೊಂಡರು.

 


Share this with Friends

Related Post