ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಇಂದು ಮೈಸೂರು ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಮಹಾದೇವಪ್ಪ, ಪಶು ಸಾoಗೋಪನ ಸಚಿವ ಕೆ. ವೆಂಕಟೇಶ್ ಅವರ ಮುಂದಾಳತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಿದರು.
ಈ ದೇಶಕೆ ಸಂವಿಧಾನ ನೀಡಿದ ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಅಮಿತ್ ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇವೆ, ಕೂಡಲೇ ರಾಷ್ಟ್ರಪತಿಯವರು ಅಮಿತ್ ಶಾ ಅವರನ್ನು ತಕ್ಷಣ ಗೃಹ ಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಕೂಡಲೇ ಅಮಿತ್ ಶಾ ಬಂಧನವಾಗಬೇಕು ಎಂದು ಕಾಂಗ್ರೆಸ್ ನಿಯೋಗ ಆಗ್ರಹಿಸಿತು.ಅಮಿತ್ ಶಾ ಅವರ ಪರವಾಗಿ ನಿಂತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರಕ್ಕೆ ದಿಕ್ಕಾರ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.
ನರೇಂದ್ರ ಮೋದಿ ಮತ್ತು ಅಮಿತ್ ಶಾ ಭಾವಚಿತ್ರಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ಜಯಕಾರ ಹಾಕಿದರು.
ಪ್ರತಿಭಟನೆಯಲ್ಲಿ ಶಾಸಕರಾದ ಡಿ. ರವಿಶಂಕರ್, ಅನಿಲ್ ಚಿಕ್ಕಮಾದು, ವಿಧಾನಪರಿಷತ್ ಸದಸ್ಯರಾದ ಡಾ
ಯತೀಂದ್ರ ಸಿದ್ದರಾಮಯ್ಯ, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್, ಕೆಪಿಸಿಸಿ ಸದಸ್ಯರಾದ ನಜರ್ ಬಾದ್ ನಟರಾಜ್ ಸೇರಿದಂತೆ ಜಿಲ್ಲೆಯಾದ್ಯಂತ ಹಲವಾರು ಮುಖಂಡರು ಭಾಗವಹಿಸಿದ್ದರು.