Mon. Dec 23rd, 2024

ಒಳ ಮೀಸಲಾತಿ ಜಾರಿಗೆ ಕಾಂಗ್ರೆಸ್ ಮೀನಮೇಷ:ಅಶೋಕ್ ಟೀಕೆ

Share this with Friends

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಾಪ್ರಹಾರ ನಡೆಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳ ಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಜಾತಿ ಗಣತಿಯ ಬಗ್ಗೆ ಶಂಖ ಊದುತ್ತಿರುತ್ತಾರೆ‌ ಎಂದು ವ್ಯಂಗ್ಯ ವಾಡಿದರು.

ಒಳ ಮೀಸಲಾತಿಯ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿರುವುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಹಿಂದಿನ ನಮ್ಮ ಬಿಜೆಪಿ ಸರ್ಕಾರ ಒಳ ಮೀಸಲಾತಿಯನ್ನು ಜಾರಿಗೆ ತಂದಿತ್ತು. ಪ್ರಧಾನಿ ನರೇಂದ್ರ ಮೋದಿ ತೆಲಂಗಾಣಕ್ಕೆ ಬಂದಾಗ ಒಳ ಮೀಸಲಾತಿಗೆ ಅನುಮೋದನೆ ನೀಡಿದ್ದರು. ಆದರೂ ಕಾಂಗ್ರೆಸ್ ಇನ್ನೂ ಮೀನಮೇಷ ಎಣಿಸುತ್ತಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಈಗ ಎಸ್ಐಟಿ ಯದೇ ಸದ್ದು ಕೇಳಿಬರುತ್ತಿದೆ. ಒಳ ಮೀಸಲಾತಿ ಮತ್ತು ಜಾತಿ ಗಣತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ಎಸ್ಐಟಿ ರಚಿಸಿದರೆ ಅಚ್ಚರಿ ಇಲ್ಲ ಎಂದು ಅಶೋಕ್ ಟೀಕಾಪ್ರಹಾರ ನಡೆಸಿದರು.

ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ಕಾನೂನು ಅನ್ವಯವಾಗುತ್ತಿದ್ದು, ಎಸ್ಐಟಿಯ ಮೇಲೆ ಅನುಮಾನ ಹೆಚ್ಚಾಗಿ ಅದನ್ನೇ ತನಿಖೆ ಮಾಡುವ ಸ್ಥಿತಿ ಬಂದಿದೆ. ಎಸ್ಐಟಿ ಪ್ರಕಾರ, ಶಾಸಕ ಮುನಿರತ್ನ ಅವರಿಗೆ ಒಂದು ಕಾನೂನು, ವಿನಯ್ ಕುಲಕರ್ಣಿ ಅವರಿಗೆ ಒಂದು ಕಾನೂನು ಎಂಬಂತಾಗಿದೆ. ಎಸ್ಐಟಿಗಳ ನಿಜಬಣ್ಣ ಬಯಲು ಮಾಡಲು ಡಬಲ್ ಎಸ್ಐಟಿ ಎಂಬ ಘಟಕ ಸ್ಥಾಪಿಸಬೇಕಿದೆ ಎಂದು ವ್ಯಂಗ್ಯವಾಡಿದರು.

ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಾಂಗ್ರೆಸ್ ನಾಯಕರು ಚೆನ್ನಾಗಿ ಹಣ ನುಂಗಿದ್ದಾರೆ. ಇದರ ವಿರುದ್ಧ ಬಿಜೆಪಿ ಸಮರ್ಥವಾಗಿ ಪ್ರತಿಭಟನೆ ಮಾಡಿದೆ. ಬಿ.ಎಸ್.ಯಡಿಯೂರಪ್ಪನವರ ಪ್ರಕರಣಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.‌ ಆದರೆ ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ಯಾವುದೇ ತಡೆ ಇಲ್ಲ. ಈ ದೇಶದಲ್ಲಿ ನ್ಯಾಯಾಂಗವೇ ಉನ್ನತವಾದುದು. ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ನಮಗೆ ಬೇಕಿಲ್ಲ ಎಂದು ಅಶೋಕ್ ಟಾಂಗ್ ನೀಡಿದರು.


Share this with Friends

Related Post