Sat. Dec 28th, 2024

ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ ರಚನೆಗೆ ಸರ್ಕಾರ ನಿರ್ಧಾರ

Share this with Friends

ಬೆಂಗಳೂರು: ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ಅವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ಎಸ್ಐಟಿ ರಚನೆಗೆ ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಸಚಿವ ಸಂಪುಟದ ನಿರ್ಣಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ಅವರು ಸತ್ಯಸಂಶೋಧನಾ ವರದಿಯ ನಂತರ ಯಾರ ಪಾತ್ರ ಏನು ಎಂಬುದನ್ನು ತನಿಖೆ ಮಾಡಿ ಎಸ್.ಐ.ಟಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಕುನ್ಹಾ ಆಯೋಗವು 11 ಸಂಪುಟಗಳಲ್ಲಿ ವರದಿ ಸಲ್ಲಿಸಿದ್ದು,7223.64 ಕೋಟಿಗಳ ಮೊತ್ತದ ವೈದ್ಯಕೀಯ ಉಪಕರಣಗಳ ಖರೀದಿಯ ಅವ್ಯವಹಾರದ ಕುರಿತು ತನಿಖೆ ನಡೆಸಿದೆ.

500.00 ಕೋಟಿಗಳ ಮೊತ್ತದ ವಸೂಲಾತಿ ಶಿಫಾರಸ್ಸು ಮಾಡಿದೆ. ಬಿ.ಬಿ.ಎಂ.ಪಿ 4 ವಲಯಗಳ ಮತ್ತು ರಾಜ್ಯದ ಎಲ್ಲಾ 31 ಜಿಲ್ಲೆಗಳ ವರದಿ ಸಲ್ಲಿಕೆ ಬಾಕಿಯಿದೆ. 55000 ಕಡತಗಳನ್ನು ಸಂಬಂಧಪಟ್ಟ ಇಲಾಖೆಗಳಿಂದ ಪಡೆದು ಪರಿಶೀಲಿಸಿ ಆಯೋಗವು ವರದಿ ಸಲ್ಲಿಸಿದೆ.

ಈ ತನಿಖೆ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.

ಸಚಿವ ಸಂಪುಟದ ಉಪಸಮಿತಿಯ ಸದಸ್ಯರನ್ನು ಅಂತಿಮಗೊಳಿಸಲು ಮುಖ್ಯಮಂತ್ರಿಯವರಿಗೆ ಅಧಿಕಾರ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.


Share this with Friends

Related Post