ಬೆಂಗಳೂರು: ಸೈಬರ್ ಅಪರಾಧಗಳ ನಿಯಂತ್ರಣಕ್ಕಾಗಿ ಆಮ್ ಆದ್ಮಿ ಪಕ್ಷವು ಬೆಂಗಳೂರಿನಲ್ಲಿ ಪಂಗನಾಮ ಅಭಿಯಾನ ಹಮ್ಮಿಕೊಂಡಿದೆ.
ಈ ಬಗ್ಗೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಮಾತನಾಡಿ ಮಾಹಿತಿ ನೀಡಿದರು.
ದೇಶದಾದ್ಯಂತ ಅದರಲ್ಲೂ ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರು ನಗರದಲ್ಲಿ ಅದರಲ್ಲೂ ವಿದ್ಯಾವಂತರೇ ಸೈಬರ್ ಅಪರಾಧಗಳಿಗೆ ತುತ್ತಾಗಿ ಸಾವಿರಾರು ಕೋಟಿ ಹಣ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು.
ಸೈಬರ್ ಅಪರಾಧಗಳ ವಿರುದ್ಧ ಆಮ್ ಆದ್ಮಿ ಪಕ್ಷವು ಬೆಂಗಳೂರಿನಾದ್ಯಂತ ಎಲ್ಲಾ ವಾರ್ಡ್ ಗಳಲ್ಲಿ ಮನೆಮನೆಗೆ ತೆರಳಿ ಹಾಗೂ ಜನನಿ ಬಿಡ ಪ್ರದೇಶಗಳಲ್ಲಿ ಪಂಗನಾಮ ವಿಶೇಷ ಅಭಿಯಾನ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೈಬರ್ ಅಪರಾಧವನ್ನು ನಿಯಂತ್ರಿಸಲು ಸಾಧ್ಯವಾಗದಿರುವುದು ಸರ್ಕಾರಗಳ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದರು.
ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸೈಬರ್ ಕ್ರೈಮ್ ಕಡೆ ಗಮನ ಹರಿಸಬೇಕು ಎಂದು ಒತ್ತಾಯಿಸಿದ ಜಗದೀಶ್ ಚಂದ್ರ, ಜನತೆಗೆ ಅರಿವು ಮೂಡಿಸುವ ಪಂಗನಾಮ ಅಭಿಯಾನವನ್ನು ಯಶಸ್ವಿಗೊಳಿಸಲು ನಾಗರಿಕರು ಕೈಜೋಡಿಸಬೇಕೆಂದು ಮನವಿ ಮಾಡಿದರು.
ಬೆಂಗಳೂರು ನಗರ ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಮಾತನಾಡಿ ಈಗಾಗಲೇ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಅಭಿಯಾನವನ್ನು ನಡೆಸುತ್ತಿದ್ದೇವೆ. ನಾಗರೀಕರಿಂದ ಅಭೂತ ಪೂರ್ವ ಸ್ವಾಗತ ದೊರೆಯುತ್ತಿದೆ, ಒಂದು ತಿಂಗಳ ಕಾಲ ಈ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.