ಬೆಂಗಳೂರು: ರಾಜ್ಯದಲ್ಲಿ ತಲೆದೂರಿರುವ ತೀವ್ರತರವಾದ ಅಡುಗೆ ಅನಿಲ (LPG) ಅಭಾವ ಹಾಗೂ ಗಗನಕ್ಕೇರುತ್ತಿರುವ ಬೆಲೆಯನ್ನು ಖಂಡಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಇಂದು ನಗರದ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ವಿನೂತನ ಹಾಗೂ ಆಕ್ರೋಶಭರಿತ ಪ್ರತಿಭಟನೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ಮತ್ತು ಅನಿಲ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಇದರ ನೇರ ಪರಿಣಾಮವಾಗಿ ಕರ್ನಾಟಕದಲ್ಲಿ ವಾಣಿಜ್ಯ ಮತ್ತು ಗೃಹ ಬಳಕೆಯ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಗಂಭೀರ ಸಮಸ್ಯೆಯತ್ತ ಸರ್ಕಾರದ ಗಮನ ಸೆಳೆಯಲು ವಾಟಾಳ್ ನಾಗರಾಜ್ ಅವರು ಕುದುರೆ ಸಾರೋಟಿನಲ್ಲಿ ಖಾಲಿ ಗ್ಯಾಸ್ ಸಿಲಿಂಡರ್‌ಗಳನ್ನು ಪ್ರದರ್ಶಿಸುತ್ತಾ ಮೆಜೆಸ್ಟಿಕ್ ನಿಲ್ದಾಣಕ್ಕೆ ಆಗಮಿಸಿ ಗಮನ ಸೆಳೆದರು.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ವಾಟಾಳ್ ನಾಗರಾಜ್, “ಇಂದು ಗ್ಯಾಸ್ ಸಿಲಿಂಡರ್ ಇಲ್ಲದೆ ಬಡವರ ಒಲೆ ಉರಿಯುತ್ತಿಲ್ಲ. ಹೋಟೆಲ್ ಉದ್ಯಮವು ಸಂಕಷ್ಟಕ್ಕೆ ಸಿಲುಕಿದ್ದು, ಹಲವು ಹೋಟೆಲ್‌ಗಳು ಮುಚ್ಚುವ ಭೀತಿಯಲ್ಲಿವೆ. ಬೆಲೆ ಏರಿಕೆಯಿಂದಾಗಿ ಆಟೋ ಚಾಲಕರು ಹಾಗೂ ಸಾಮಾನ್ಯ ಸಾರ್ವಜನಿಕರು ಬೀದಿಗೆ ಬರುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೇವಲ ಅಂತರಾಷ್ಟ್ರೀಯ ಕಾರಣಗಳನ್ನು ನೀಡಿ ಕೈಕಟ್ಟಿ ಕುಳಿತುಕೊಳ್ಳಬಾರದು. ಕೂಡಲೇ ಮಧ್ಯಪ್ರವೇಶಿಸಿ ಅನಿಲ ಪೂರೈಕೆಯನ್ನು ಸುಗಮಗೊಳಿಸಬೇಕು,” ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಬಸ್ ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಸಿಲಿಂಡರ್ ಕೊರತೆ ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

