Fri. Mar 6th, 2026

ಗೋವಾದಂತೆ ಕರ್ನಾಟಕ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿ: ಡಿಸಿಎಂ

Share this with Friends

ಮಂಗಳೂರು:ಗೋವಾ ಹಾಗೂ ಕರ್ನಾಟಕಕ್ಕೆ ಅಂತಹ ವ್ಯತ್ಯಾಸವೇನು ಇಲ್ಲ ಅಲ್ಲಿರುವ ಸೌಂದರ್ಯ ನಮ್ಮಲ್ಲೂ ಇದೆ. ಆದರೆ ಅವುಗಳನ್ನು ಬಳಸಿಕೊಳ್ಳುವಲ್ಲಿ ನಾವು ಎಡವಿದ್ದೇವೆ ಅದಕ್ಕಾಗಿಯೇ ಈಗ ರಾಜ್ಯದ ಕರಾವಳಿ ಭಾಗದಲ್ಲಿ ಖಾಸಗಿಯವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಿದ್ದೇವೆ ಜತೆಗೆ ಸರ್ಕಾರವೂ ಒಂದಷ್ಟು ಮೂಲಸೌಕರ್ಯಗಳನ್ನು ಒದಗಿಸಿಕೊಡುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ ಮಾತನಾಡಿದ ಅವರು,ಕರಾವಳಿ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ”.“ನಮ್ಮಲ್ಲಿ 320 ಕಿ ಮೀ ಕರಾವಳಿ ಪ್ರದೇಶವಿದೆ.“ ಸುಂದರ ಸಮುದ್ರ ತೀರವಿದೆ. ಗೋವಾ ಹಾಗೂ ನಮಗೆ ಇರುವ ವ್ಯತ್ಯಾಸವೇನು? ಅಲ್ಲಿರುವ ಸೌಂದರ್ಯ ನಮ್ಮಲ್ಲೂ ಇವೆ. ಆದರೆ ಅವುಗಳನ್ನು ಬಳಸಿಕೊಳ್ಳುವಲ್ಲಿ ನಾವು ಎಡವಿದ್ದೇವೆ. ಕರಾವಳಿ ಭಾಗದಲ್ಲಿ ನಾವು ಪ್ರವಾಸೋದ್ಯಮ ನೀತಿ ರೂಪಿಸಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಣೆ ಮಾಡಬೇಕಾದರೆ ಇಲ್ಲಿರುವ ಅಡಚಣೆ ಹೇಗೆ ಸರಿಪಡಿಸಬಹುದು. ಕಾನೂನು ಚೌಕಟ್ಟಿನಲ್ಲಿ ನಿವಾರಣೆ ಮಾಡಿ ನೂತನ ನೀತಿ ತರಬೇಕು ಎಂದುಕೊಂಡಿದ್ದೇವೆ ಎಂದರು.

“ಈ ಭಾಗಕ್ಕೆ ಮತ್ತೆ ಮರುಜೀವ ನೀಡಲು ಪ್ರತ್ಯೇಕ ಪ್ರವಾಸೋದ್ಯಮ ನೀತಿ ಅಗತ್ಯವಿದೆ. ಈ ಭಾಗ ರಾತ್ರಿ 7ರ ನಂತರ ಸ್ತಬ್ಧವಾಗುತ್ತದೆ ಎಂದು ನಾನು ಈ ಹಿಂದೆ ಹೇಳಿದ್ದೇನೆ. ಕೆಲವರು ಸ್ವಾಗತಿಸಿದರು, ಕೆಲವರು ಟೀಕಿಸಿದರು. ನನ್ನ ಮಾತನ್ನು ಸುಳ್ಳು ಮಾಡುವ ಛಲ ಬರಲಿ ಎಂದು ನಾನು ಟೀಕೆ ಮಾಡಿದ್ದೆ. ಇಂದು ನಾನು ಎಲ್ಲಾ ಉದ್ಯಮದವರನ್ನು ಈ ಸಮಾವೇಶಕ್ಕೆ ಆಹ್ವಾನಿಸಿದ್ದೇನೆ. ನಿಮ್ಮ ಅಭಿಪ್ರಾಯ ಸ್ವೀಕರಿಸಲು ನಾವು ಬದ್ಧವಾಗಿದ್ದೇವೆ. ನೀವು ಮುಕ್ತವಾಗಿ ನಿಮ್ಮ ಸಲಹೆಗಳನ್ನು ನೀಡಿ, ನಿಮ್ಮ ಸಲಹೆ ಅಭಿಪ್ರಾಯಗಳನ್ನು ಒಟ್ಟು ಸೇರಿಸಿ ಹಣಕಾಸು ಸ್ಥಿತಿಗೆ ಅನುಗುಣವಾಗಿ ನಾವು, ಸಿಎಂ, ಪ್ರವಾಸೋದ್ಯಮ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಚರ್ಚೆ ಮಾಡಿ ಸಚಿವ ಸಂಪುಟದ ಮುಂದೆ ಪ್ರಸ್ತಾಪ ಮಾಡುತ್ತೇವೆ” ಎಂದರು.

ಇಲ್ಲಿ ಪ್ರಕೃತಿ ಸಂಪತ್ತಿನ ಜೊತೆಗೆ, ಈ ಭಾಗದ ಹಿರಿಯರು ದೇಶಕ್ಕೆ ಅನೇಕ ಬ್ಯಾಂಕುಗಳನ್ನು ಕೊಟ್ಟಿದ್ದಾರೆ. ಬ್ಯಾಂಕುಗಳಲ್ಲಿ ಶಿಸ್ತು ಕೊಟ್ಟ ಜನ ನೀವು. ಪ್ರಪಂಚದಾದ್ಯಂತ ಈ ಕರಾವಳಿ ಭಾಗದ ಜನ ಕೆಲಸ ಮಾಡುತ್ತಿದ್ದಾರೆ. ಇದು ಶೈಕ್ಷಣಿಕ ಕೇಂದ್ರವೂ ಆಗಿದೆ. ಇಲ್ಲಿರುವಷ್ಟು ಮೆಡಿಕಲ್, ಇಂಜಿನಿಯರ್, ಪಿಯುಸಿ ಕಾಲೇಜು ಬೇರೆ ಯಾವುದೇ ಜಿಲ್ಲೆಯಲ್ಲಿ ಇಲ್ಲ. ನೀವು ಹೆಚ್ಚು ಮಾನವ ಸಂಪನ್ಮೂಲವನ್ನು ತಯಾರು ಮಾಡುತ್ತಿದ್ದೀರಿ. ಆದರೂ ಈ ಭಾಗದ ಪ್ರತಿಭಾವಂತ ಜನರು ಬೆಂಗಳೂರು, ಮುಂಬೈ ಸೇರಿದಂತೆ ಪ್ರಪಂಚದ ಮೂಲೆ ಮೂಲೆಗೆ ಹೋಗುತ್ತಿದ್ದಾರೆ” ಹಾಗಾಗಿ ಈ ಭಾಗದ ಪ್ರವಾಸೋಧ್ಯಮ ಅಭಿವೃದ್ಧಿ ಆಗಬೇಕಿದೆ ಎಂದು ತಿಳಿಸಿದರು.

“ಸಿಆರ್ ಜಡ್, ರಕ್ಷಣಾ ಇಲಾಖೆ, ಕರಾವಳಿ ಅಭಿವೃದ್ಧಿ ಇಲಾಖೆ ಹೀಗೆ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಬೇಕು ಎಂದು ಹೇಳಿದ್ದೇನೆ. ಸಾರ್ವಜನಿಕರ ಅಭಿಪ್ರಾಯಗಳನ್ನು ಸಹ ಪಡೆಯಲಾಗುವುದು. ಯಾವುದನ್ನೂ ಸಹ ಗುಟ್ಟಾಗಿ ಮಾಡುವುದಿಲ್ಲ. ಸಭೆಯಲ್ಲಿ ಬಂದ ಅಭಿಪ್ರಾಯಗಳನ್ನು ಸಾರ್ವಜನಿಕರ ಗಮನಕ್ಕೆ ತರಲಾಗುತ್ತದೆ. ಯಾವುದೇ ಬದಲಾವಣೆ ಮಾಡಬೇಕು ಎಂದರೂ ಮಾಡಲಾಗುವುದು.‌ ಒಟ್ಟಾರೆ ಈ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕು ಎಂದರು.


Share this with Friends

Related Post