Mon. Oct 12th, 2026

ಪ್ರಜಾಪ್ರಭುತ್ವ ರಕ್ಷಣೆಗೆ ನ್ಯಾಯಾಂಗವೇ ಕೊನೆ ದಾರಿ: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್

Share this with Friends

ಚೆನ್ನೈ: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಹಾಗೂ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡುವುದನ್ನು ಬಿಟ್ಟರೆ ವಿರೋಧ ಪಕ್ಷಗಳ ಮುಂದೆ ಬೇರೆ ಯಾವುದೇ ಪರ್ಯಾಯ ಮಾರ್ಗ ಉಳಿದಿಲ್ಲ ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ತಮಿಳುನಾಡಿನ ಚೆನ್ನೈನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಪ್ರಸ್ತುತ ರಾಜಕೀಯ ಮತ್ತು ಸಾಂವಿಧಾನಿಕ ವಿದ್ಯಮಾನಗಳ ಕುರಿತು ಕಳಕಳಿ ವ್ಯಕ್ತಪಡಿಸಿದರು. ‘ಇಂಡಿಯಾ’ (INDIA) ಮೈತ್ರಿಕೂಟದ ನಾಯಕರಿಗೆ ಮುಖ್ಯ ನ್ಯಾಯಮೂರ್ತಿಗಳು ಭೇಟಿಗೆ ಅವಕಾಶ ನಿರಾಕರಿಸಿರುವ ಕುರಿತು ಕೇಳಲಾದ ಪ್ರಶ್ನೆಗೆ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ನಡೆಗೆ ಅಸಮಾಧಾನ:

ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯಬೇಕಾದ ಸಾಂವಿಧಾನಿಕ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕಿದೆ. ವಿರೋಧ ಪಕ್ಷಗಳ ಮನವಿಗಳಿಗೆ ಚುನಾವಣಾ ಆಯೋಗವು ಸೂಕ್ತವಾಗಿ ಸ್ಪಂದಿಸದೇ ಇದ್ದಾಗ, ದೇಶದ ಪ್ರಧಾನಮಂತ್ರಿಯಾದವರು ಮಧ್ಯಪ್ರವೇಶಿಸಿ ವಿರೋಧ ಪಕ್ಷಗಳ ನಾಯಕರನ್ನು ಕರೆದು ಅವರ ಸಮಸ್ಯೆ ಏನೆಂಬುದನ್ನು ಆಲಿಸಬೇಕಿತ್ತು. ಆದರೆ, ಕೇಂದ್ರ ಸರ್ಕಾರವಾಗಲಿ ಅಥವಾ ಚುನಾವಣಾ ಆಯೋಗವಾಗಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ. ಇಂತಹ ವಿಷಮ ಪರಿಸ್ಥಿತಿಯಲ್ಲಿ ದೇಶದ ಜನರ ಧ್ವನಿಯನ್ನು ಆಲಿಸಬೇಕಾದ ಪರಮೋಚ್ಛ ಜವಾಬ್ದಾರಿ ಮುಖ್ಯ ನ್ಯಾಯಾಧೀಶರ ಮೇಲಿದೆ ಎಂದು ಅವರು ಹೇಳಿದರು.

ಮತದಾನದ ಹಕ್ಕೇ ನಮ್ಮ ಬದುಕು:

ನಾಗರಿಕರ ಮತದಾನದ ಹಕ್ಕು ಕೇವಲ ರಾಜಕೀಯ ಪ್ರಕ್ರಿಯೆಯಲ್ಲ, ಅದು ನಮ್ಮ ಬದುಕಿನ ಹಕ್ಕಾಗಿದೆ ಎಂದು ಬಣ್ಣಿಸಿದ ಡಿ.ಕೆ. ಶಿವಕುಮಾರ್, ಸಾರ್ವಜನಿಕ ಜೀವನದಲ್ಲಿರುವ ನಾವು ಪ್ರಜಾಪ್ರಭುತ್ವದ ಉಳಿವಿಗಾಗಿ ಕಾನೂನಾತ್ಮಕವಾಗಿ ಸಿಗುವ ಎಲ್ಲಾ ರೀತಿಯ ಅವಕಾಶಗಳನ್ನು ಬಳಸಿಕೊಳ್ಳಲಿದ್ದೇವೆ. ವಿರೋಧ ಪಕ್ಷದ ನಾಯಕರು ದೇಶದ ಕೋಟ್ಯಂತರ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರ ಹಕ್ಕುಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ, ಇಲ್ಲಿ ಏನು ಬೇಕಾದರೂ ಆಗಬಹುದು ಎಂದು ಅವರು ಎಚ್ಚರಿಸಿದರು.

 


Share this with Friends

Related Post