Tue. Oct 20th, 2026

ಕಬ್ಬು ಬೆಳೆಗಾರರ ಸಮಸ್ಯೆ ಸೌಹಾರ್ದತೆಯಿಂದ ಬಗೆಹರಿಯಲಿ; ಸ್ಥಳೀಯ ಸಂಸ್ಥೆ ಚುನಾವಣೆಗೆ ಸಜ್ಜಾಗಲು ಸಚಿವರಿಗೆ ಸಿಎಂ ಸೂಚನೆ

Share this with Friends

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ ಒಬ್ಬರ ಮೇಲೆ ಹೊರಿಸದೆ, ಎಲ್ಲರೂ ಒಟ್ಟಾಗಿ ಸೌಹಾರ್ದತೆಯಿಂದ ಬಗೆಹರಿಸಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರೈತರಿದ್ದರೆ ಮಾತ್ರ ಸಕ್ಕರೆ ಕಾರ್ಖಾನೆಗಳು ಇರಲು ಸಾಧ್ಯ. ಅದೇ ರೀತಿ ಕಾರ್ಖಾನೆಗಳು ನಷ್ಟವಿಲ್ಲದೆ ನಡೆದರೆ ರೈತರಿಗೂ ಅನುಕೂಲವಾಗುತ್ತದೆ. ಇದು ಎಲ್ಲರ ಬದುಕಿನ ಪ್ರಶ್ನೆಯಾಗಿದ್ದು; ರೈತರು, ಕಾರ್ಖಾನೆ ಮಾಲೀಕರು ಮತ್ತು ಸರ್ಕಾರದ ಸಮಸ್ಯೆಗಳ ಕುರಿತು ಒಟ್ಟಾಗಿ ಚರ್ಚಿಸಬೇಕಿದೆ” ಎಂದರು.

ಕೇಂದ್ರದ ಭೇಟಿಗೆ ಸಮಯ ನಿಗದಿಯಾಗಿಲ್ಲ:

ರಾಜ್ಯದ ಬರ ಪರಿಹಾರದ ಕುರಿತು ಚರ್ಚಿಸಲು ಕೇಂದ್ರ ಸರ್ಕಾರದ ಭೇಟಿಗೆ ಸಮಯ ಕೋರಲಾಗಿದ್ದು, ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಬೆಳಗಾವಿ ಭಾಗದ ರೈತರಿಗೆ ನೀಡಿದ ಮಾತಿನಂತೆ ಕೇಂದ್ರ ಸಚಿವರು, ಸಂಸದರು ಹಾಗೂ ಸ್ಥಳೀಯ ಸಚಿವರನ್ನು ಒಳಗೊಂಡ ಸಭೆಯನ್ನು ಶೀಘ್ರದಲ್ಲೇ ಆಯೋಜಿಸಲಾಗುವುದು. ಕೇಂದ್ರ ಮಂತ್ರಿಗಳೂ ಸಹ ತಮ್ಮ ಮಟ್ಟದಲ್ಲಿ ಉತ್ತಮ ಕೆಲಸ ಮಾಡಿದ್ದು, ಎಲ್ಲರ ಅನುಕೂಲಕ್ಕೆ ತಕ್ಕಂತೆ ದಿನಾಂಕ ನಿಗದಿಪಡಿಸಿ ಈ ಸಮಸ್ಯೆಯನ್ನು ಶಾಂತಿಯುತವಾಗಿ ಇತ್ಯರ್ಥಪಡಿಸಲಾಗುವುದು ಎಂದು ಅವರು ಹೇಳಿದರು.

ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ:

ಸಚಿವರೊಂದಿಗೆ ನಡೆಸಿದ ಸಭೆಯ ಕುರಿತು ಪ್ರತಿಕ್ರಿಯಿಸಿದ ಸಿಎಂ, “ಡಿಸೆಂಬರ್ 31ರೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಚುನಾವಣಾ ಆಯೋಗವು ಅಕ್ಟೋಬರ್ 27ರಂದು ಪರಿಷ್ಕೃತ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದು, ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಎಲ್ಲಾ ಕಡೆ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವರಿಗೆ ಸೂಚನೆ ನೀಡಲಾಗಿದೆ” ಎಂದರು. ಗ್ರಾಮೀಣ ಮಟ್ಟದಲ್ಲಿ ರಸ್ತೆ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗೆ ಶಾಸಕರು ಅನುದಾನದ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನಾಡಿನ ಸಮಸ್ತ ಜನತೆಗೆ, ರೈತರಿಗೆ ಹಾಗೂ ಕಾರ್ಮಿಕ ವರ್ಗಕ್ಕೆ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸೌಹಾರ್ದಯುತ ಶುಭಾಶಯಗಳನ್ನು ಕೋರಿದರು.

 


Share this with Friends

Related Post