Thu. Jun 25th, 2026

ಸೂಪರ್ ಎಲ್ ನಿನೋ ಭೀತಿ, ಸಂಭವನೀಯ ಬರ: ಪ್ರಕೃತಿ ವಿಕೋಪ ನಿರ್ವಹಣೆಗೆ ಅಧಿಕಾರಿಗಳಿಗೆ ಡಾ. ಜಿ. ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ!

Share this with Friends

ಬೆಂಗಳೂರು: ಜಾಗತಿಕ ಹವಾಮಾನ ವೈಪರೀತ್ಯದ ಭಾಗವಾಗಿ ತಲೆದೂರಿರುವ ‘ಸೂಪರ್ ಎಲ್ ನಿನೋ’ (Super El Niño) ಪರಿಣಾಮದಿಂದಾಗಿ ರಾಜ್ಯದಲ್ಲಿ ಸಂಭವನೀಯ ಬರ ಪರಿಸ್ಥಿತಿ ಹಾಗೂ ಮಳೆಯ ಕೊರತೆ ಎದುರಾಗುವ ಆತಂಕ ಮೂಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಭರಪೂರ ಸಿದ್ಧತೆಗಳನ್ನು ಆರಂಭಿಸಿದೆ.

ವಿಧಾನಸೌಧದ ಕಾರ್ಯಾಲಯದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ತುರ್ತು ಪರಿಶೀಲನಾ ಸಭೆ ನಡೆಸಿದ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಹಲವು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದ್ದಾರೆ.

ರಾಜ್ಯದಲ್ಲಿ ಉಂಟಾಗಬಹುದಾದ ನೀರಿನ ಅಭಾವ, ಜಾನುವಾರುಗಳಿಗೆ ಮೇವಿನ ಕೊರತೆ ಹಾಗೂ ಕೃಷಿ ಚಟುವಟಿಕೆಗಳ ಮೇಲಾಗುವ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರಡ.

ಜಿಲ್ಲಾವಾರು ತುರ್ತು ಕಾರ್ಯಯೋಜನೆಗೆ ಆದೇಶ

ಸಂಭವನೀಯ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಲಭ್ಯತೆ ಕಾಯ್ದುಕೊಳ್ಳುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಇದಕ್ಕಾಗಿ ಪ್ರತಿಯೊಂದು ಜಿಲ್ಲೆಯ ವಾಸ್ತವ ಸ್ಥಿತಿಗೆ ಅನುಗುಣವಾಗಿ ಜಿಲ್ಲಾವಾರು ವಿಶೇಷ ಕಾರ್ಯಯೋಜನೆಗಳನ್ನು (District Action Plan) ತಕ್ಷಣವೇ ಸಿದ್ಧಪಡಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳು (DC) ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ (CEO) ಕಟ್ಟುನಿಟ್ಟಿನ ಸೂಚನೆ ನೀಡಲು ಅಧಿಕಾರಿಗಳಿಗೆ ಡಾ. ಜಿ. ಪರಮೇಶ್ವರ್ ಆದೇಶಿಸಿದ್ದಾರೆ.

ಜಲಾಶಯ ಹಾಗೂ ಅಂತರ್ಜಲದ ಮೇಲೆ ನಿರಂತರ ನಿಗಾ

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ಪ್ರಸ್ತುತ ಇರುವ ಅಂತರ್ಜಲದ ಸ್ಥಿತಿ ಹಾಗೂ ಕುಡಿಯುವ ನೀರಿನ ಬಳಕೆಯ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸಲು ನಿರ್ಧರಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ತಡೆಯಲು ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಅಗತ್ಯವಿರುವ ಅನುಮತಿಯನ್ನು ಯಾವುದೇ ವಿಳಂಬವಿಲ್ಲದೆ ತ್ವರಿತಗತಿಯಲ್ಲಿ ನೀಡಬೇಕು. ಮುಖ್ಯವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ತ್ವರಿತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.

 

 


Share this with Friends

Related Post