ಬೆಂಗಳೂರು, ಮಾ.1: ಅಪ್ರಾಪ್ತ ವಯಸ್ಸಿನ ಮಕ್ಕಳು ಅತಿವೇಗ ಹಾಗೂ ಅಜಾಗರೂ ಕತೆಯಿಂದ ವಾಹನ ಓಡಿಸುವುದನ್ನು ತಡೆಯಲು ಪೂರ್ವ ವಿಭಾಗದ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು
ನಿನ್ನೆ ಇಡೀ ದಿನ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯ ಶಾಲಾ ಕಾಲೇಜುಗಳ ಬಳಿ ವಿಶೇಷ ಕಾರ್ಯಾಚರಣೆ ನಡೆಸಿ 924 ದ್ವಿಚಕ್ರ ವಾಹನಗಳನ್ನು ತಪಾಸಣೆ ನಡೆಸಿ 400 ಕ್ಕಿಂತಲೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಯಿತು.
ಈ ವೇಳೆ ಸಂಚಾರ ಪೊಲೀಸರು 2,12,000 ರೂ ದಂಡವನ್ನು ಸಂಗ್ರಹಣೆ ಮಾಡಿದರಲ್ಲದೆ ಪೋಷಕರಿಗೆ ಮತ್ತು ದ್ವಿಚಕ್ರ ವಾಹನ ಸವಾರರಿಗೆ ಸಂಚಾರ ನಿಯಮ ಪಾಲನೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.
ಶಾಲಾ ಕಾಲೇಜುಗಳ ಬಳಿ ಮಕ್ಕಳ ಪೋಷಕರು ಮತ್ತು ಅಪ್ರಾಪ್ತ ವಯಸ್ಸಿನ ಮಕ್ಕಳು ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿದ್ದು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಬಂದಿದ್ದವು.
ಈ ಹಿನ್ನೆಲೆಯಲ್ಲಿ ಸಂಚಾರ ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣೆಗಳ ಸರಹದ್ದಿನ ಶಾಲಾ ಕಾಲೇಜುಗಳ ಬಳಿ ವಿಶೇಷ ಕಾರ್ಯಾಚರಣೆ ಕೈಗೊಂಡು ಪ್ರಕರಣಗಳನ್ನು ದಾಖಲು ಮಾಡಲಾಗಿದೆ
ಏಕಮುಖ ಸಂಚಾರಕ್ಕೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ವಿರುದ್ಧ 112 ಪ್ರಕರಣಗಳು,ಹೆಲೈಟ್ ಧರಿಸದೆ ದ್ವಿ ಚಕ್ರ ವಾಹನ ಚಾಲನೆ ಮಾಡುವವರ ವಿರುದ್ಧ 260 ಪ್ರಕರಣಗಳು, ಟ್ರಿಪಲ್ ರೈಡಿಂಗ್ ಮಾಡುವವರ ವಿರುದ್ಧ 36 ಪ್ರಕರಣಗಳನ್ನು ದಾಖಲಿಸಲಾಗಿದೆ.
ಸುಮಾರು 924 ದ್ವಿಚಕ್ರ ವಾಹನಗಳನ್ನು ತಪಾಸಣೆ ಮಾಡಿ 400 ಕ್ಕಿಂತಲೂ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಿ ರೂ. 2,12,000 ದಂಡ ಸಂಗ್ರಹಣೆ ಮಾಡಲಾಗಿದೆ.
ಇದರಲ್ಲಿ ಯಾವುದೇ ಅಪ್ರಾಪ್ತ ವಾಹನ ಸವಾರರು ಕಂಡು ಬಂದಿಲ್ಲ, ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪೋಷಕರು ಮತ್ತು ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿ ಮಕ್ಕಳ ಪೋಷಕರು ಮತ್ತು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಸಂಚಾರ ನಿಯಮ ಪಾಲನೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.
ಮುಂದಿನ ದಿನಗಳಲ್ಲಿ ಶಾಲಾ ಕಾಲೇಜುಗಳ ಬಳಿ ವಿಶೇಷ ಕಾರ್ಯಾಚರಣೆಯನ್ನು ಮುಂದುವರೆಸಲಾಗುವುದು ಎಂದು
ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.