ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಿಗೆ ತರಬೇತಿ ಪಡೆಯುವ ಅಭ್ಯರ್ಥಿಗಳ ಆಯ್ಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆಯನ್ನು ಶನಿವಾರ (ನ.15) ನಡೆಸಲಿದೆ.
ಬೆಂಗಳೂರು, ಧಾರವಾಡ ಮತ್ತು ಕಲ್ಬುರ್ಗಿ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಹಿಂದುಳಿದ ವರ್ಗಗಳ ಇಲಾಖೆ, ಆಸಕ್ತರಿಂದ ಅರ್ಜಿ ಕರೆದಿದ್ದು, 14,700 ಮಂದಿ ಪರೀಕ್ಷೆ ತೆಗೆದು ಕೊಂಡಿದ್ದಾರೆ. ಅವರಿಗೆ ನಾಳೆ ಪರೀಕ್ಷೆ ಇದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಐಎಎಸ್ ತರಬೇತಿ ಸಂಸ್ಥೆಗಳಲ್ಲಿ ಉಚಿತ ತರಬೇತಿ ಸಿಗಲಿದೆ. ಅದರ ಶುಲ್ಕವನ್ನು ಹಿಂದುಳಿದ ವರ್ಗಗಳ ಇಲಾಖೆ ಭರಿಸಲಿದೆ.
ಪಿಜಿ ವೈದ್ಯಕೀಯ: ಸೇವಾ ನಿರತರಿಗೆ ನ.16ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
2025ನೇ ಸಾಲಿನ ಎಂಡಿ ಮತ್ತು ಎಂಎಸ್ ಕೋರ್ಸುಗಳಿಗೆ ನೋಂದಣಿ ಮಾಡಲು ಅರ್ಹ ಸೇವಾ ನಿರತ ಅಭ್ಯರ್ಥಿಗಳಿಗೆ ಆನ್ ಲೈನ್ ಪೋರ್ಟಲ್ ತೆರೆಯಲಾಗಿದ್ದು, ಆನ್ ಲೈನ್ ಮೂಲಕ ನೋಂದಾಯಿಸಿಕೊಂಡು ನ.16 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
ಪಿಜಿನೀಟ್ – 2025ರಲ್ಲಿ ನಿಗದಿಪಡಿಸಿರುವ ಕನಿಷ್ಠ ಪರ್ಸೆಂಟೈಲ್ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಪರ್ಸೆಂಟೈಲ್ ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಮಾತ್ರ ನೋಂದಣಿ ಮಾಡಿಕೊಳ್ಳಲು ಅರ್ಹರಿರುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಪಪಡಿಸಿದ್ದಾರೆ.
ನೊಂದಣಿ ಶುಲ್ಕ, ದಾಖಲಾತಿ ಪರಿಶೀಲನೆಯ ವಿವರಗಳು, ದಾಖಲಾತಿ ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲಾತಿಗಳು, ಇತರ ವಿವರಗಳನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ದಾಖಲೆಗಳ ಪರಿಶೀಲನೆಗೆ ನ.17ರಂದು (ಬೆ.11ರಿಂದ ಮ.2) ಇಲ್ಲಿನ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಅವರು ಸೂಚಿಸಿದ್ದಾರೆ.
ಪಿಜಿಸಿಇಟಿ: ಶುಲ್ಕ ಪಾವತಿಗೆ ನ.15ರವರೆಗೆ ದಿನಾಂಕ ವಿಸ್ತರಣೆ:
ಎಂಬಿಎ, ಎಂಸಿಎ, ಎಂಇ, ಎಂಟೆಕ್ ಮತ್ತು ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಹಾಗೂ ಅಂತಿಮ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಹಾಗೂ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಲು ನ.15ರಂದು ಮಧ್ಯಾಹ್ನ 3 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ.
ಅದೇ ದಿನ ಸಂಜೆ 5.30ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

