ಬೆಂಗಳೂರು: ನಗರದ ಶಂಕರಪುರದಲ್ಲಿರುವ ಜ್ಞಾನೋದಯ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಅಕಾಡೆಮಿಯಲ್ಲಿ ಭಾನುವಾರ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 200ಕ್ಕೂ ಹೆಚ್ಚು ಜನರು ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಜ್ಞಾನೋದಯ ಶಿಕ್ಷಣ ಸಂಸ್ಥೆಗಳು ಹಾಗೂ ರಂಗದೊರೈ ಮೆಮೋರಿಯಲ್ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ಹೃದಯರೋಗ, ನೇತ್ರ ತಪಾಸಣೆ, ದಂತ ಚಿಕಿತ್ಸೆ, ಸ್ತ್ರೀ ಸಂಬಂಧಿ ಕಾಯಿಲೆಗಳು, ಚರ್ಮರೋಗ, ಇಎನ್ಟಿ (ಕಿವಿ, ಮೂಗು, ಗಂಟಲು), ಕ್ಯಾನ್ಸರ್ ಸ್ಕ್ರೀನಿಂಗ್ ಹಾಗೂ ರಕ್ತದೊತ್ತಡ ಸೇರಿದಂತೆ ವಿವಿಧ ಸಾಮಾನ್ಯ ವೈದ್ಯಕೀಯ ಪರೀಕ್ಷೆಗಳನ್ನು ಪರಿಣಿತ ವೈದ್ಯರು ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿ.ಆರ್. ಶ್ರೀನಿಧಿ, “ಇಂದಿನ ಬದಲಾದ ಜೀವನಶೈಲಿಯಲ್ಲಿ ರಕ್ತದೊತ್ತಡ, ಮಧುಮೇಹ ಹಾಗೂ ಹೃದಯಾಘಾತದಂತಹ ಸಮಸ್ಯೆಗಳು ಸಾಮಾನ್ಯವಾಗುತ್ತಿವೆ. ಇಂತಹ ಸಮಯದಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಉಚಿತ ಶಿಬಿರಗಳು ಅತ್ಯಗತ್ಯ. ಸಾರ್ವಜನಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು,” ಎಂದರು. ಅಲ್ಲದೆ, ಒತ್ತಡ ಮುಕ್ತ ಜೀವನಕ್ಕಾಗಿ ಸೂರ್ಯ ನಮಸ್ಕಾರ, ಯೋಗ ಮತ್ತು ಪ್ರಾಣಾಯಾಮಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಂಗದೊರೈ ಮೆಮೋರಿಯಲ್ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ರಾಜ್ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

