Fri. Mar 6th, 2026

ಪೊಲೀಸರಿಗೆ ಗುಡ್ ನ್ಯೂಸ್ ಕೊಟ್ಟ ಇಲಾಖೆ: ಹುಟ್ಟುಹಬ್ಬ, ವಾರ್ಷಿಕೋತ್ಸವಕ್ಕೆ ಸಿಗಲಿದೆ ರಜೆ

Share this with Friends

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಪೊಲೀಸ್ ಇಲಾಖೆ ಗುಡ್ ನ್ಯೂಸ್ ನೀಡಿದ್ದು,ಹುಟ್ಟು ಹಬ್ಬದ ಹಾಗೂ ವಿವಾಹ ವಾರ್ಷಿಕೋತ್ಸವ ದಿನದಂದು ಸಾಂದರ್ಭಿಕ ರಜೆ ನೀಡುವಂತೆ ಆದೇಶ ಹೊರಡಿಸಿದೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚತನಗೊಳ್ಳಲು, ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಮನೋಬಲ ವೃದ್ಧಿಯಾಗುತ್ತದೆ, ಒತ್ತಡ ಕಡಿಮೆಯಾಗುತ್ತದೆ ಮತ್ತು ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ. ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ಷಮತೆಗೆ ಸಹಕಾರಿಯಾಗುತ್ತದೆ.ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಿ ಎಂದು ಎಲ್ಲಾ ಘಟಕಾಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ ಸಲೀಂ ನಿರ್ದೇಶನ ನೀಡಿದ್ದಾರೆ.

ಸಾಂದರ್ಭಿಕ ರಜೆ ಸಂಬಂಧ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ (DG & IGP) ಅಧಿಕೃತ ಪತ್ರ ಬರೆದಿದ್ದನ್ನು ಪರಿಶೀಲಿಸಿದ ಡಿಜಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಪ್ರಮುಖವಾಗಿ ಕೆಳ ಹಂತದ ಸಿಬ್ಬಂದಿಗಳಾದ ಪೊಲೀಸ್ ಕಾನ್ಸ್‌ಟೇಬಲ್ (PC), ಹೆಡ್ ಕಾನ್ಸ್‌ಟೇಬಲ್ (HC) ಸಹಾಯಕ ಪೊಲೀಸ್ ಉಪನಿರೀಕ್ಷಕರು (ASI), ಈ ಶ್ರೇಣಿಯ ಅಧಿಕಾರಿಗಳಿಗೆ ರಜೆ ಸೌಲಭ್ಯ ಸಿಗಲಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳ ಒತ್ತಡ ರಹಿತರನ್ನಾಗಿಸುವ ಮತ್ತು ಕೌಟಂಬಿಕ ಸಂಭಂದಗಳನ್ನು ಇನ್ನಷ್ಟು ಬಲಪಡಿಸುವ  ದೃಷ್ಟಿಯಿಂದ ಅಧಿಕಾರಿ ಮತ್ತು ಸಿಬ್ಬಂದಿಗಳ ಹುಟ್ಟು ಹಬ್ಬದ ಹಾಗೂ ವಿವಾಹ ವಾರ್ಷಿಕೋತ್ಸವ ದಿನದಂದು ರಜೆ ನೀಡುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ರಾಜ್ಯ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದನ್ನು ಇಲ್ಲಿ ಸ್ಮರಿಸಬಹುದು.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ಮೋಹನ್ ಕುಮಾರ್ ದಾನಪ್ಪ, ನಮ್ಮ ಪತ್ರದ ನಿಮಿತ್ಯ ಇಂದು ರಾಜ್ಯ ಪೊಲೀಸ್ ಇಲಾಖೆಯ ಡಿಜಿಪಿ ರವರು ಅಧಿಕಾರಿ ಸಿಬ್ಬಂದಿಗಳ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವ ದಿನದಂದು ಸಾಂಧರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ರಾಜ್ಯದ ಎಲ್ಲಾ ಘಟಕಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.


Share this with Friends

Related Post