Fri. Nov 1st, 2024

ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ: ಸಿದ್ದರಾಮಯ್ಯ ಹೇಳಿಕೆ

Share this with Friends

ಬೆಂಗಳೂರು, ಫೆ. 22: ರಾಜ್ಯದ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು‌ ಮಕ್ಕಳಿಗೆ ಮಾಲ್ಟ್‌ ಕುಡಿಸುವ‌ ಮೂಲಕ ಉದ್ಘಾಟಿಸಿ ಮಾತನಾಡಿದ ಸಿಎಂ ಉತ್ತಮ ಪೌಷ್ಠಿಕಾಂಶ ಸಿಕ್ಕರೆ ಉತ್ತಮ ಶಿಕ್ಷಣಕ್ಕೆ ರಹದಾರಿಯಾಗಿದೆ,ಅದಕ್ಕಾಗಿ ರಾಜ್ಯದ 55 ಲಕ್ಷ ಸರ್ಕಾರಿ ಶಾಲೆ ಮಕ್ಕಳಿಗೆ
ರಾಗಿ ಮಾಲ್ಟ್ ನೀಡಲಾಗುತ್ತದೆ
ಎಂದು ಹೇಳಿದರು.

2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ.ಹಾಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆವು ಎಂದು ‌ಹೇಳಿದರು.

ಇದರ ಜತೆಗೆ ಕಳೆದ ಬಜೆಟ್ ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು,
ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.

ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ.

ಶಿಕ್ಷಣ ಅಂದರೆ ಕೇವಲ ಓದು, ಬರಹ ಕಲಿಸುವುದಲ್ಲ,ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಅಗತ್ಯ. ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್ ಗಳೂ ಈಗ ಮೌಡ್ಯಕ್ಕೆ ಜೋತು ಬಿದ್ದಿದ್ದಾರೆ. ಬಸವಾದಿ ಶರಣರು ಮೌಡ್ಯಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವೈಚಾರಿಕ ಶಿಕ್ಷಣದಿಂದ ಮಾತ್ರ ಮೌಡ್ಯಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಸಿದ್ದರಾಮಯ್ಯ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಅಧಿಕಾರಿಗಳು ಹಾಜರಿದ್ದರು.


Share this with Friends

Related Post