ಬೆಂಗಳೂರು,ಆ.15: ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮುಖ್ಯ ಮಂತ್ರಗಳು ಮಾತನಾಡಿದರು.
ನಮ್ಮ 5 ಗ್ಯಾರಂಟಿಯಿಂದ ಮಾಸಿಕ 4 ರಿಂದ 5 ಸಾವಿರ ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ. ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಿದ್ದೇವೆ ಎಂದು ತಿಳಿಸಿದರು.
ಐದು ಗ್ಯಾರಂಟಿ ಯೋಜನೆಗಳು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರವಾಗಿ ಆರ್ಥಿಕ ನೆರವು ಸಿಗುತ್ತಿದೆ ಯಾವುದೇ ಊಹಾಪೋಹಗಳನ್ನು ನಂಬಬೇಡಿ ಎಂದು ಸಿಎಂ ತಿಳಿಸಿದರು.
ನಾಡಿನ ಸಮಸ್ತ ಜನರು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಮೂಲ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ಗೌರವವಾಗಿದೆ.
ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಭಗತ್ ಸಿಂಗ್ ಮತ್ತು ಹುತಾತ್ಮರಾದ ಅವರ ಕ್ರಾಂತಿಕಾರಿ ಸ್ನೇಹಿತರು, ನಮಗೆ ಸಂವಿಧಾನ ನೀಡಿದ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್, ವೈಜ್ಞಾನಿಕ ಹಾಗೂ ಜ್ಯಾತ್ಯತೀತ ತಳಹದಿಯಲ್ಲಿ ಆಧುನಿಕ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದ ಜವಾಹರಲಾಲ್ ನೆಹರೂ ಮುಂತಾದ ಮಹನೀಯರನ್ನು ನಾವು ಸ್ಮರಿಸಬೇಕು ಹಾಗೂ ಅವರ ಆಶಯಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ನೆರೆಹೊರೆಯ ದೇಶಗಳಲ್ಲಿ ತಲೆದೋರಿರುವ ಪ್ರಕ್ಷುಬ್ಧ ಪರಿಸ್ಥಿತಿ ನಮ್ಮಲ್ಲೂ ಎದುರಾಗಬಹುದು ಎಂಬ ಎಚ್ಚರಿಕೆ ನಮ್ಮೆಲ್ಲರಲ್ಲಿ ಇರಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.