ನೆಲಮಂಗಲ/ಮಾಗಡಿ: ಕಾಲೇಜಿನ ಪ್ರಾಜೆಕ್ಟ್ ಕೆಲಸದ ನಿಮಿತ್ತ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರಿನ ಟೈರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ, ಬೆಂಗಳೂರಿನ ಸಪ್ತಗಿರಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಮೃತ ವಿದ್ಯಾರ್ಥಿನಿಯರನ್ನು 19 ವರ್ಷದ ವೈಷ್ಣವಿ ಮತ್ತು ಜಾನವಿ ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಾಜೆಕ್ಟ್ ಕಾರ್ಯಕ್ಕಾಗಿ ಕಾರಿನಲ್ಲಿ ಕುಣಿಗಲ್ ಸಮೀಪದ ಉತ್ತರಿ ಬೆಟ್ಟಕ್ಕೆ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ-75ರ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್ ಅಚಾನಕ್ ಸ್ಫೋಟಗೊಂಡಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಗೆ ಅಪ್ಪಳಿಸಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ವೈಷ್ಣವಿ ಮತ್ತು ಜಾನವಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಆಸ್ಪತ್ರೆ ಮುಂದೆ ಮುಗಿಲು ಮುಟ್ಟಿದ ಆಕ್ರಂದನ:
ವಿಷಯ ತಿಳಿದು ಆಸ್ಪತ್ರೆಗೆ ಧಾವಿಸಿದ ಮೃತ ವಿದ್ಯಾರ್ಥಿನಿಯರ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಮಕ್ಕಳನ್ನು ಕಳೆದುಕೊಂಡ ತಾಯಂದಿರು ಆಸ್ಪತ್ರೆಯ ಆವರಣದಲ್ಲಿ ಎದೆಬಡಿದುಕೊಂಡು ರೋದಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಜೊತೆಗೆ ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿ ವೃಂದದಲ್ಲೂ ತೀವ್ರ ಶೋಕ ಮಡುಗಟ್ಟಿದೆ.
ಘಟನಾ ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

