ಹಾಸನ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ (NH 75) ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ಚಲಿಸುತ್ತಿದ್ದ ಖಾಸಗಿ ಬಸ್ ಒಂದರ ಟೈರ್ ಸ್ಫೋಟಗೊಂಡು, ಭೀಕರವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 36 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಅತ್ಯಂತ ಪವಾಡಸದೃಶವಾಗಿ ಪಾರಾಗಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಾಂತಿಗ್ರಾಮದ ಸಮೀಪ ತಲುಪುತ್ತಿದ್ದಂತೆ ಹಠಾತ್ತನೆ ಹಿಂಭಾಗದ ಟೈರ್ ಸ್ಫೋಟಗೊಂಡಿದೆ. ಟೈರ್ ಸ್ಫೋಟದ ತೀವ್ರತೆಗೆ ಎಂಜಿನ್ ಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಷಣಾರ್ಧದಲ್ಲಿ ಬಸ್‌ನಾದ್ಯಂತ ದಟ್ಟವಾದ ಹೊಗೆ ಮತ್ತು ಬೆಂಕಿ ಆವರಿಸಿದೆ. ತಕ್ಷಣವೇ ಎಚ್ಚೆತ್ತ ಬಸ್ ಚಾಲಕ ಮತ್ತು ಸಿಬ್ಬಂದಿ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ, ಪ್ರಯಾಣಿಕರೆಲ್ಲರನ್ನೂ ತಕ್ಷಣವೇ ಕೆಳಗೆ ಇಳಿಯುವಂತೆ ಸೂಚಿಸಿದ್ದಾರೆ.
ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ ಎಲ್ಲಾ 36 ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಪ್ರಯಾಣಿಕರು ಕೆಳಗೆ ಇಳಿಯುತ್ತಿದ್ದಂತೆ ಇಡೀ ಬಸ್ ಸಂಪೂರ್ಣವಾಗಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಧಗಧಗನೆ ಹೊತ್ತಿ ಉರಿದಿದೆ. ಇನ್ನು ಕೆಲವು ನಿಮಿಷ ತಡವಾಗಿದ್ದರೂ ಭಾರಿ ಪ್ರಾಣಹಾನಿ ಸಂಭವಿಸುವ ಸಾಧ್ಯತೆಯಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಪಘಾತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

