ಟೆಹ್ರಾನ್,ಮೇ.20: ಹೆಲಿಕಾಪ್ಟರ್ ಪತನಗೊಂಡು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಕಾಪ್ಟರ್ ನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ತಿಳಿಸಿವೆ
ಹೆಲಿಕಾಪ್ಟರ್ ನಲ್ಲಿದ್ದ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್‌ಮ್ಯಾನ್‌ಗಳು ಮೃತಪಟ್ಟಿದ್ದಾರೆ ಎಂದು ವರದಿ ಮಾಡಿವೆ.
ಪರ್ವತ ಶ್ರೇಣಿಗಳ ನಡುವೆ ಇಬ್ರಾಹಿಂ ರೈಸಿ ಹಾಗೂ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪ್ಯರಿತ್ಯದಿಂದ ಭಾನುವಾರ ಸಂಜೆ ಪತನಗೊಂಡಿತ್ತು. ಹೆಲಿಕಾಪ್ಟರ್ ಹಾರಾಟದ ಸುಮಾರು 30 ನಿಮಿಷಗಳ ನಂತರ ಸಂಪರ್ಕವನ್ನು ಕಳೆದುಕೊಂಡಿತ್ತು.
ಇಬ್ರಾಹಿಂ ರೈಸಿ ಮತ್ತು ಅಜೆರ್ಬೈಜಾನಿ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಅವರು ಗಡಿಭಾಗದಲ್ಲಿ ಕ್ವಿಜ್ ಖಲಾಸಿ ಅಣೆಕಟ್ಟನ್ನು ಉದ್ಘಾಟಿಸಿ ಇರಾನ್ ನಗರ ತಬ್ರಿಜ್‍ಗೆ ಹಿಂದಿರುಗುವಾಗ ಈ ಘಟನೆ ನಡೆದಿತ್ತು.
ಇರಾನ್ ಅಧ್ಯಕ್ಷರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ನಾಯಕರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.