Mon. Dec 23rd, 2024

ಹಳ್ಳಿಕಾರ ಸಮುದಾಯಕ್ಕೆ ಸಹಾಯ ಮಾಡುವೆ -ಸಿ.ಎಂ

Share this with Friends

ಬೆಂಗಳೂರು: ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ ಖಂಡಿತಾ ಸಹಾಯ ಮಾಡುತ್ತೇನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಉದ್ಘಾಟಿಸಿ ಹಳ್ಳಿಕಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಸಿಎಂ ಮಾತನಾಡಿದರು.

ಜಾತಿ ತಾರತಮ್ಯದ ವ್ಯವಸ್ಥೆಯಲ್ಲಿ ಶಿಕ್ಷಣ ಇಲ್ಲದಿದ್ದರೆ ಸಮಾಜದ ಮುಖ್ಯವಾಹಿನಿಯಲ್ಲಿ ಇರುವುದು ಕಷ್ಟ ಎಂದು ಹೇಳಿದರು.

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎಂಬ ಬೇಡಿಕೆ ಇದೆ. ಸಮಾಜದಲ್ಲಿ ಯಾವ್ಯಾವ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯ. 2011 ರಲ್ಲಿ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ ಎಂದು ತಿಳಿಸಿದರು.

ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದಾ ಎಂಬುದನ್ನು ಪರಿಶೀಲಿಸಬೇಕಿದೆ. ಈ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ. ಆದ್ದರಿಂದ ಶಾಶ್ವತ ಹಿಂದುಳಿದ ಆಯೋಗಕ್ಕೆ ನಿಮ್ಮ ಬೇಡಿಕೆ ಕಳುಹಿಸಿ ಅಧ್ಯಯನ ಮಾಡಿಸಿ ವರದಿ ಪಡೆಯಲಾಗುವುದು. ಆ ಬಳಿಕ ಸಮುದಾಯಕ್ಕೆ ನ್ಯಾಯಯುತವಾಗಿ ಏನು ಸಲ್ಲಬೇಕು ಎನ್ನುವುದನ್ನು ಪರಿಶೀಲಿಸಿ ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದರು.

ಹಳ್ಳಿಕಾರರ ಸಂಘದ ಉಪಾಧ್ಯಕ್ಷರಾದ ಕೆ.ಎಂ.ನಾಗರಾಜು ಅವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಡಿಸಿಎಂ ಡಿ.ಕೆ ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸಚಿವರುಗಳಾದ ರಾಮಲಿಂಗ ರೆಡ್ಡಿ, ಡಿ.ಸುಧಾಕರ್, ಮಾಜಿ ಸಚಿವರಾದ ಶಾಸಕ ಎಸ್ ಟಿ ಸೋಮಶೇಖರ್,ಕೃಷ್ಣಪ್ಪ, ಪ್ರಿಯಕೃಷ್ಣ, ಹಳ್ಳಿಕಾರ ಸಮುದಾಯದ ಪದಾಧಿಕಾರಿಗಳು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.


Share this with Friends

Related Post