Sat. Mar 7th, 2026

ಬಲ ಪ್ರದರ್ಶನ ಮಾಡುವ ಅವಶ್ಯಕತೆ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Share this with Friends

ಬೆಳಗಾವಿ:ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ, ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ,ನಾನು ಸಿಎಂ ಸೇರಿದಂತೆ 140 ಶಾಸಕರೂ ಒಂದೇ, ನಮ್ಮದು ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ‌

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು,ನಾನು ಯಾವುದೇ ಡಿನ್ನರ್ ಮೀಟಿಂಗ್ ಮಾಡಿಲ್ಲ. ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಮ್ಮ ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುತ್ತದೆಯೇ? ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು, ಅಷ್ಟೇ. ಅವರಿಗೆ ಗೌರವ ನೀಡುವ ಉದ್ದೇಶದಿಂದ ಅವರ ಮನೆಗೆ ಹೋಗಿದ್ದೆ. ಇದರ ಹೊರತಾಗಿ ಬೇರೇನೂ ಇಲ್ಲ” ಎಂದು ತಿಳಿಸಿದರು.

“ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟವನ್ನು ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲ. ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೇ ಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆ” ಎಂದರು.

ಸಿಎಂ ಹುದ್ದೆ ವಿಚಾರವಾಗಿ ಯತೀಂದ್ರ ಅವರು ಪದೇ ಪದೆ ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಳಿದಾಗ, “ನನಗೆ ಆ ಬಗ್ಗೆ ಗೊತ್ತಿಲ್ಲ. ಮುಖ್ಯಮಂತ್ರಿಗಳು ಎಲ್ಲದಕ್ಕೂ ಉತ್ತರ ನೀಡಲಿದ್ದಾರೆ” ಎಂದರು.

ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, “ಅದರ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು ಸಿಎಂ ಸೇರಿದಂತೆ 140 ಶಾಸಕರದೂ ಒಂದೇ ಗುಂಪು. ಅದು ಕಾಂಗ್ರೆಸ್ ಗುಂಪು. ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡಬೇಡಿ” ಎಂದು ತಿಳಿಸಿದರು.


Share this with Friends

Related Post