ಬೆಂಗಳೂರು: ನಮ್ಮ ಮೆಟ್ರೋದ ಬಹುನಿರೀಕ್ಷಿತ ‘ಪಿಂಕ್ ಲೈನ್’ ಮಾರ್ಗದ ಐಐಎಂಬಿ (IIMB) ಮೆಟ್ರೋ ನಿಲ್ದಾಣವನ್ನು ‘ಬಿಲೇಕಹಳ್ಳಿ – ಐಐಎಂಬಿ ಮೆಟ್ರೋ ನಿಲ್ದಾಣ’ ಎಂದು ಮರುನಾಮಕರಣ ಮಾಡಲು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ನಗರಾಭಿವೃದ್ಧಿ ಸಚಿವಾಲಯಕ್ಕೆ ಬಿಎಂಆರ್ಸಿಎಲ್ (BMRCL) ಮೂಲಕ ಅಧಿಕೃತ ಪ್ರಸ್ತಾವನೆ ಸಲ್ಲಿಸಿದ್ದಾರೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಲೇಕಹಳ್ಳಿ ನಿವಾಸಿಗಳ ಸುದೀರ್ಘ ದಿನಗಳ ಬೇಡಿಕೆಯನ್ನು ಪರಿಗಣಿಸಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
ಇತ್ತೀಚೆಗೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸ್ಥಳೀಯ ಇತಿಹಾಸ ಮತ್ತು ಪ್ರಾದೇಶಿಕ ಗುರುತನ್ನು ಉಳಿಸುವ ನಿಟ್ಟಿನಲ್ಲಿ ಈ ಜಂಟಿ ನಿರ್ಧಾರಕ್ಕೆ ಬರಲಾಗಿದೆ. ಈ ಸಮಿತಿಯಲ್ಲಿ ಸ್ಥಳೀಯ ಶಾಸಕರಾದ ಎಂ. ಸತೀಶ್ ರೆಡ್ಡಿ ಹಾಗೂ ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಉಪಸ್ಥಿತರಿದ್ದು, ಪಕ್ಷಾತೀತವಾಗಿ ಈ ಪ್ರಸ್ತಾವನೆಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಈ ಭಾಗದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸ್ಥಳೀಯ ಹೆಸರನ್ನು ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಸಂಸ್ಥೆಯ ಹೆಸರಿನೊಂದಿಗೆ ಜೋಡಿಸುವುದು ಈ ಮರುನಾಮಕರಣದ ಮುಖ್ಯ ಉದ್ದೇಶವಾಗಿದೆ.
ಮೆಟ್ರೋ ನಿಲ್ದಾಣಗಳ ಹೆಸರನ್ನು ಬದಲಾಯಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡರ ಸಹಮತಿ ಅಗತ್ಯವಿರುತ್ತದೆ. ಈ ಹಿನ್ನೆಲೆಯಲ್ಲಿ, ಪ್ರಸ್ತಾವನೆಗೆ ಕೇಂದ್ರ ನಗರಾಭಿವೃದ್ಧಿ ಸಚಿವಾಲಯದಿಂದ ಶೀಘ್ರದಲ್ಲೇ ಅನುಮೋದನೆ ಪಡೆದು, ಆದಷ್ಟು ಬೇಗ ಜಾರಿಗೆ ತರಲು ತಾವು ಸಕ್ರಿಯವಾಗಿ ಶ್ರಮಿಸುವುದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಕಾಲೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಪಿಂಕ್ ಲೈನ್ನ ಈ ಎಲಿವೇಟೆಡ್ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಉದ್ಘಾಟಿಸಲಿದ್ದು, ಉದ್ಘಾಟನೆಗೂ ಮುನ್ನವೇ ಈ ನಿಲ್ದಾಣವು ತನ್ನ ಹೊಸ ಜೋಡಿ ಹೆಸರನ್ನು ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

