ನವದೆಹಲಿ: ಕರ್ನಾಟಕದ ಅತ್ಯಂತ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ‘ಕಾಡುಗೊಲ್ಲ’ ಜನಾಂಗವನ್ನು ಶೀಘ್ರವೇ ಪರಿಶಿಷ್ಟ ಪಂಗಡ (ST) ವರ್ಗಕ್ಕೆ ಸೇರ್ಪಡೆ ಮಾಡಬೇಕೆಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದರು.
ಬುಧವಾರ ನವದೆಹಲಿಯ ಪಾರ್ಲಿಮೆಂಟ್ ಭವನದಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸೋಮಣ್ಣ, ಸಮುದಾಯದ ದಶಕಗಳ ಕಾಲದ ಬೇಡಿಕೆಯ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಕಾಡುಗೊಲ್ಲ ಸಮುದಾಯವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ತೀರಾ ಹಿಂದುಳಿದಿದ್ದು, ಅವರಿಗೆ ಸಂವಿಧಾನಬದ್ಧವಾಗಿ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಲು ಎಸ್‌ಟಿ ಪಟ್ಟಿಗೆ ಸೇರಿಸುವುದು ಅತ್ಯಗತ್ಯವಾಗಿದೆ ಎಂದು ಅವರು ವಿವರಿಸಿದರು.
ಶ್ರೀಗಳ ನೇತೃತ್ವದ ನಿಯೋಗದ ಒತ್ತಾಸೆ:
ಕಳೆದ ಸೋಮವಾರವಷ್ಟೇ ಚಿತ್ರದುರ್ಗದ ಯಾದವಾನಂದ ಮಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಕಾಡುಗೊಲ್ಲ ಸಮುದಾಯದ ಪ್ರಮುಖರ ನಿಯೋಗವು ಸಚಿವ ಸೋಮಣ್ಣ ಅವರನ್ನು ಭೇಟಿ ಮಾಡಿತ್ತು. ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ನಿಯೋಗವು ನೀಡಿದ್ದ ಮನವಿಯ ಬೆನ್ನಲ್ಲೇ, ಸಚಿವರು ಇಂದು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯಿಸಿದ್ದಾರೆ.
ತುಮಕೂರು ಸೇರಿದಂತೆ ರಾಜ್ಯದ ವಿವಿಧೆಡೆ ಹರಡಿಕೊಂಡಿರುವ ಈ ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರ್ಕಾರವು ಸಕಾರಾತ್ಮಕ ನಿರ್ಧಾರ ಕೈಗೊಳ್ಳುವ ವಿಶ್ವಾಸವನ್ನು ಸಚಿವರು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ.

