Fri. Dec 27th, 2024

ರಾಜ್ಯದಲ್ಲಿ ಕನ್ನಡ ವಾತಾವರಣ ನಿರ್ಮಾಣ ಮಾಡುವುದು ಅತ್ಯಂತ ಅವಶ್ಯ-ಸಿಎಂ

Share this with Friends

ಬೆಂಗಳೂರು,ಜೂ. 20: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವದ ಪ್ರಯುಕ್ತ ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದ ನಂತರ ಸಿಎಂ ಮಾತನಾಡಿದರು.

ಮಾತೃಭಾಷೆಯಲ್ಲಿ ಮಾತನಾಡುವುದು ಹೆಮ್ಮೆಯ ಸಂಗತಿಯಾಗಬೇಕು,
ಪ್ರತಿಯೊಬ್ಬರೂ ಕರ್ನಾಟಕದಲ್ಲಿ ಬಾಳಿ ಬದುಕುವವರೊಂದಿಗೆ ಕನ್ನಡದಲ್ಲಿಯೇ ಮಾತನಾಡುತ್ತೇನೆ. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು ಎಂದು ಕರೆ ನೀಡಿದರು.

ಕನ್ನಡಿಗರು ಉದಾರಿಗಳು, ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರೂ ಕೂಡ ಕನ್ನಡ ಕಲಿಯದೆ ಬದುಕುವ ವಾತಾವರಣವಿದೆ. ತಮಿಳುನಾಡು , ಆಂಧ್ರ, ಕೇರಳಕ್ಕೆ ಹೋದರೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡುತ್ತಾರೆ. ನಾವೂ ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯವಾಗಬೇಕು,ಅದರಲ್ಲಿ ಕೀಳರಿಮೆ ಬೇಕಿಲ್ಲ ಎಂದು ಸಿಎಂ ಹೇಳಿದರು

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ.ಅದಕ್ಕಾಗಿ ಇಲ್ಲಿ ವಾಸ ಮಾಡುವವರೆಲ್ಲರೂ ಕನ್ನಡವನ್ನು ಕಲಿಯಲೇಬೇಕು ಎಂದು ಸೂಚಿಸಿದರು.

ನಮ್ಮ ಭಾಷೆ, ನೆಲ, ನಾಡಿನ ಬಗೆಗೆ ಗೌರವ, ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನವೆಂಬರ್ 1 ರೊಳಗೆ ಈ ಕಾಮಗಾರಿ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ.ಇದೊಂದು ಉತ್ತಮವಾದ ಕೆಲಸ ಎಂದು ಸಿಎಂ ತಿಳಿಸಿದರು.

ವಿಧಾನ ಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಮತ್ತಿತರರು ಉಪಸ್ಥಿತರಿದ್ದರು


Share this with Friends

Related Post