ಬೆಂಗಳೂರು.ಮಾ.25 :: 12 ವರ್ಷಗಳ ನಂತರ ಶಾಸಕ ಜನಾರ್ದನ ರೆಡ್ಡಿ ಅವರು ಮಾತೃ ಪಕ್ಷ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕೆಆರ್‌ಪಿಪಿ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್‌ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್‌ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷದ ಶಾಲು ಹೊದಿಸಿ, ಭಾವುಟ ನೀಡಿ ಸ್ವಾಗತಿಸಿದರು. ಅಲ್ಲದೇ ಪಕ್ಷ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿದೆ ಎಂದು ಭರವಸೆಯನ್ನೂ ನೀಡಿದರು. ಈ ವೇಳೆ ಜನಾರ್ದನ ರೆಡ್ಡಿ, ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.
ಪಕ್ಷಕ್ಕೆ ಸೇರಿದ ಎಲ್ಲರಿಗೂ ಪ್ರಾಥಮಿಕ ಸದಸ್ಯತ್ವ ನೀಡಿ ಕೇಸರಿ ಶಾಲು ಹಾಕಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಪಕ್ಷ ಸೇರ್ಪಡೆಯಾದ ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಜನಾರ್ದನ ರೆಡ್ಡಿ ಸೇರ್ಪಡೆಗೆ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದಲ್ಲಿ ಆನೆಬಲ ಬಂದಂತಾಗಿದೆ. ಅವರು ಯಾವುದೇ ಷರತ್ತು ಇಲ್ಲದೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಬೇರೆ ಬೇರೆ ಕಾರಣಗಳಿಂದ ಪಕ್ಷದಿಂದ ದೂರವಾಗಿದ್ದರು. ಹಿಂದಿನ ಎಲ್ಲ ಕಹಿ ಘಟನೆಗಳನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ. ಜನಾರ್ದನ ರೆಡ್ಡಿಗೆ ಪಕ್ಷದಲ್ಲಿ ಯಾವ ಸ್ಥಾನಮಾನ ನೀಡಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ತೀರ್ಮಾನಿಸುತ್ತೇವೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯ್ಕಷ ಬಿ.ವೈ.ವಿಜಯೇಂದ್ರ ಮಾತನಾಡಿ, ಬಹಳ ಸಂತೋಷ ಆಗಿದೆ. ಆತ್ಮೀಯರಾಗಿರುವ ಗಾಲಿ ಜನಾರ್ದನ ರೆಡ್ಡಿ ಶಾಸಕರು ಹೌದು. ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸ್ಥಾಪನೆ ಮಾಡಿ, ಶಾಸಕರಾಗಿದ್ದಾರೆ. ಅವರದ್ದೇ ಆದ ರೀತಿಯಲ್ಲಿ ಪಕ್ಷ ನಡೆಸಿಕೊಂಡು ಬಂದಿದ್ದರು. ಗಾಲಿ ಜನಾರ್ದನ ರೆಡ್ಡಿ ಅವರು ತಾವೇ ಸ್ಥಾಪಿಸಿದ ಪಕ್ಷ ವಿಸರ್ಜನೆ ಮಾಡಿ, ಬಿಜೆಪಿ ಜೊತೆಗೆ ವಿಲೀನ ಮಾಡಿದ್ದಾರೆ. ಅವರ ಸೇರ್ಪಡೆಯಿಂದ ನಮಗೆ ದೊಡ್ಡ ಶಕ್ತಿ ಬಂದಿದೆ. ಮೋದಿ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ ಎಂದರು.