ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ಕ್ರೋಢೀಕೃತ ಫಲಿತಾಂಶದ ಅಂಕಿಅಂಶಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಬಾರಿ ರಾಜ್ಯದಲ್ಲಿ ಒಟ್ಟಾರೆ ಶೇಕಡಾ 92.25 ರಷ್ಟು ದಾಖಲೆ ಪ್ರಮಾಣದ ಫಲಿತಾಂಶ ಬಂದಿದ್ದು, ಕಳೆದ ವರ್ಷಕ್ಕೆ (ಶೇ. 85.19) ಹೋಲಿಸಿದರೆ ಫಲಿತಾಂಶದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಗ್ರಾಮಾಂತರ ವಿದ್ಯಾರ್ಥಿಗಳ ಸಾಧನೆ:
ಪ್ರಸಕ್ತ ಸಾಲಿನ ಫಲಿತಾಂಶದಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶದಲ್ಲಿ ಶೇ. 92.01 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಶೇ. 92.77 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ.
ಲಿಂಗವಾರು ಫಲಿತಾಂಶ:
ಪ್ರತಿ ಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮುಂಚೂಣಿಯಲ್ಲಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು ಬಾಲಕಿಯರಲ್ಲಿ ಶೇ. 88.74 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಬಾಲಕರ ಉತ್ತೀರ್ಣ ಪ್ರಮಾಣ ಶೇ. 83.71 ರಷ್ಟಿದೆ.
ವಿಭಾಗವಾರು ವಿವರಗಳು:
ವಿವಿಧ ತರಗತಿ ವಿಭಾಗಗಳಲ್ಲಿ ವಿಜ್ಞಾನ ವಿಭಾಗವು ಎಂದಿನಂತೆ ಅತ್ಯುತ್ತಮ ಪ್ರದರ್ಶನ ನೀಡಿದೆ.
ವಿಜ್ಞಾನ ವಿಭಾಗ: ಶೇ. 91.72
ವಾಣಿಜ್ಯ ವಿಭಾಗ: ಶೇ. 88.11
ಕಲಾ ವಿಭಾಗ: ಶೇ. 72.91
ಫಲಿತಾಂಶ ವೀಕ್ಷಣೆ ಎಲ್ಲಿ?:
ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆದಿದ್ದ ಈ ಪರೀಕ್ಷೆಗಳ ಅಂತಿಮ ಫಲಿತಾಂಶವನ್ನು ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ ಆದ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

