Mon. Dec 23rd, 2024

ಸಿದ್ದರಾಮಯ್ಯ ಲೆಕ್ಕಾಚಾರ : ಬಜೆಟ್ Live Updates

Karnataka-Budget-2024 Live
Share this with Friends

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ 15 ನೇ ಬಜೆಟನ್ನು ಮಂಡಿಸಲು ಆರಂಭಿಸಿದ್ದಾರೆ. 10.15 ಕ್ಕೆ ಬಜೆಟ್ ಮಂಡನೆ ಆರಂಭಿಸಿದ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕೆಲವೊಂದು ಮಹತ್ವದ ಹಾಗೂ ಜನಪ್ರಿಯ ಘೋಷಣೆಗಳನ್ನು ಮಾಡುತ್ತಿದ್ದಾರೆ.


* 3.71 ಲಕ್ಷ ಕೋಟಿ ರೂ.ಗಳ ಅಂದಾಜು ವೆಚ್ಚದ ಬೃಹತ್ ಬಜೆಟ್ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು 3.71 ಲಕ್ಷ ಕೋಟಿ ರೂ.ಗಳ ಅಂದಾಜು ವೆಚ್ಚದ ಬೃಹತ್ ಬಜೆಟ್ ಅನ್ನು ಮಂಡಿಸಿದರು. 15ನೇ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯನವರು ಬಜೆಟ್‍ನ ಗಾತ್ರವನ್ನು ಹಿಂದಿನ ಸಾಲಿಗಿಂತಲೂ ಮತ್ತಷ್ಟು ಹಿಗ್ಗಿಸಿದ್ದಾರೆ.

* ಮದ್ಯಪ್ರಿಯರ ನಶೆಯ ಮೇಲೆ ಪೆಟ್ಟು : ಭಾರತೀಯ ತಯಾರಿಕಾ ಮದ್ಯ (ಐಎಂಎಲ್) ಮತ್ತು ಬಿಯರ್‍ನ ದರಗಳನ್ನು ನೆರೆರಾಜ್ಯಗಳ ಸ್ಲಾಬ್‍ಗನುಗುಣವಾಗಿ ಪರಿಷ್ಕರಿಸುವುದಾಗಿ ಹೇಳುವ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಮದ್ಯಪ್ರಿಯರ ನಶೆಯ ಮೇಲೆ ಪೆಟ್ಟು ನೀಡಿದ್ದಾರೆ. ವಿಧಾನಸಭೆಯಲ್ಲಿಂದು 2024-25ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿಯವರು ವಾಣಿಜ್ಯ ತೆರಿಗೆ, ನೋಂದಣಿ ಮುದ್ರಾಂಕ, ಅಬಕಾರಿ, ಸಾರಿಗೆ, ಗಣಿ ಮತ್ತು ಭೂ ವಿಜ್ಞಾನ ಸೇರಿ ಸಂಪನ್ಮೂಲ ಸಂಗ್ರಹ ಇಲಾಖೆಗಳಿಂದ ಒಟ್ಟು 1,96,525 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಿದ್ದಾರೆ. ಮದ್ಯದ ಘೋಷಿತ ಸ್ಲಾಬ್‍ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆರಾಜ್ಯದ ಮದ್ಯದ ಬೆಳವಣಿಗೆಗನುಗುಣವಾಗಿ ದೇಶೀಯವಾಗಿ ತಯಾರಾಗುವ ಮದ್ಯ (ಐಎಂಎಲ್) ಮತ್ತು ಬಿಯರ್ಸ್ ಸ್ಲಾಬ್‍ಗಳನ್ನು ಪರಿಷ್ಕರಿಸುವುದಾಗಿ ತಿಳಿಸಿದ್ದಾರೆ. ನೆರೆರಾಜ್ಯಗಳಲ್ಲಿ ಕೆಲವು ಮದ್ಯ ಮಾರಾಟ ದರ ರಾಜ್ಯಕ್ಕಿಂತಲೂ ದುಬಾರಿಯಾಗಿದೆ. ಪರಿಷ್ಕರಣೆಗೊಂಡರೆ ಸಹಜವಾಗಿಯೇ ಅದು ಏರಿಕೆಯಾಗುವ ನಿರೀಕ್ಷೆಯಿದೆ.

* ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ : ಕಾಂಗ್ರೆಸ್ ಸರ್ಕಾರಕ್ಕೆ ಭರ್ಜರಿ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ಐದು ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗು ಅನ್ನ ಭಾಗ್ಯ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ ಒಟ್ಟು 52 ಸಾವಿರ ಕೋಟಿ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು.

* ಕೋವಿಡ್‍ನಲ್ಲಿ ಅವ್ಯವಹಾರಗಳ ವಿರುದ್ಧ ಕಠಿಣ ಕ್ರಮ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹಲವು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು, ಕೋವಿಡ್‍ನಲ್ಲಿ ಅವ್ಯವಹಾರಗಳ ವಿರುದ್ಧ ಕಠಿಣ ಕ್ರಮ, ಅಬ್ ಅಂಡ್ ಸ್ಕೋಪ್ ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಪನೆ, 2024-25ನೇ ಸಾಲಿನಲ್ಲಿ 1,89,893 ಕೋಟಿ ರೂ.ಗಳ ರಾಜ್ಯ ಸ್ವಂತ ತೆರಿಗೆ ಸಂಗ್ರಹಣೆ ಅಂದಾಜಿಸಲಾಗಿದ್ದು, ತೆರಿಗೆಯೇತರ ಮೂಲಗಳಿಂದ 13,500 ಕೋಟಿ ರೂ.ಗಳನ್ನು ನಿರೀಕ್ಷಿಸಿದ್ದಾರೆ.

* ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ : ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ತಿಳಿಸಿದ್ದಾರೆ. ಮಾಜಿ ದೇವದಾಸಿಯರಿಗೆ ಪ್ರಸ್ತುತ ನೀಡುತ್ತಿರುವ 1500ರೂ ಮಾಸಾಶನವನ್ನು 2000 ರೂ.ಗೆ ಹೆಚ್ಚಳ ಮಾಡಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಬದುಕು ಉತ್ತಮ ಪಡಿಸಲು ಮೈತ್ರಿ ಯೋಜನೆಯಡಿ ನೀಡಲಾಗುತ್ತಿರುವ ಮಾಸಾಶನ 800ರೂನಿಂದ 1200ರೂಗೆ ಹೆಚ್ಚಳ ಮಾಡುವುದಗಾಗಿ ಘೋಷಿಸಿದ್ದಾರೆ. ವಸತಿ ರಹಿತ ದೇವದಾಸಿಯರಿಗೆ ರಾಜೀವ್ ಗಾಂ ವಸತಿರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ.20 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ತರಬೇತಿ ಆಯೋಜಿಸಲು 10 ಕೋಟಿ ಬಜೆಟ್?ನಲ್ಲಿ ಮೀಸಲಿಡಲಾಗಿದೆ. ಅಂಗನವಾಡಿ ಚಟವಟಿಕೆ ಸುಗಮಕ್ಕಾಗಿ 90 ಕೋಟಿ ವೆಚ್ಚದಲ್ಲಿ 75,938 ಸ್ಟಾರ್ಟ್ ಫೋನ್‍ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಗುವುದು.

* ಸರ್ಕಾರಿ ನೌಕರರಿಗೆ ನಿರಾಸೆ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಸರ್ಕಾರಿ ನೌಕರರಿಗೆ ಮತ್ತೊಮ್ಮೆ ಮಧ್ಯಂತರ ಪರಿಹಾರದೊಂದಿಗೆ ವೇತನ ಪರಿಷ್ಕರಣೆಯಾಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರು 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಬಳಿಕ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.

* ಒಲಂಪಿಕ್‍ನಲ್ಲಿ ಪದಕ ಗೆದ್ದವರಿಗೆ ಪ್ರೋತ್ಸಾಹ ಧನ : ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 3 ಕೋಟಿ ಪ್ರೋತ್ಸಾಹ ಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಶುಕ್ರವಾರ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದ್ದು, ಕಾಮನ್ ವೆಲ್ತ್‍ಗೇಮ್‍ನಲ್ಲಿ ಪದಕ ಗೆದ್ದವರಿಗೂ ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದ್ದಾರೆ. ಕಾಮನ್ ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 35 ಲಕ್ಷ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 25 ಲಕ್ಷ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 15 ಲಕ್ಷ ಬಹುಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಾಡಿಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲೂ ಶೇಕಡಾ 2 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು ಎಂದು ಹೇಳಿದ್ದಾರೆ.

* ಅನ್ನದಾತರಿಗೆ ಬಡ್ಡಿ ರಹಿತ ಸಾಲದ ಮೊತ್ತ 5 ಲಕ್ಷದವರೆಗೆ ಏರಿಕೆ : ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ನಾಡಿನ ಅನ್ನದಾತರಿಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಂಘಗಳ ಮೂಲಕ ನೀಡುವ ಬಡ್ಡಿ ರಹಿತ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷದವರೆಗೆ ಏರಿಕೆ ಮಾಡಿದ್ದಾರೆ. ಜೊತೆಗೆ ಮಧ್ಯಮ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ವದ ತೀರ್ಮಾನವನ್ನು ಘೋಷಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27 ಸಾವಿರ ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ 50 ಸಾವಿರ ರೂ.ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ 7,631 ಕೋಟಿ ರೂ. ಬೆಳೆ ಸಾಲ ಮನ್ನ ಮಾಡಲಾಗಿತ್ತು . ಡಿಸಿಸಿ ಬ್ಯಾಂಕ್‍ಗಳಿಗೆ ಸುಮಾರು 132 ಕೋಟಿ ಬಿಡುಗಡೆಯಾಗದ ಪರಿಣಾಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಡಿಸಿಸಿ ಬ್ಯಾಂಕ್‍ಗಳಿಗೆ ಬಾಕಿ ಇರುವ 132 ಕೋಟಿ ಹಣವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

* ಪರಿಷ್ಕೃತ ಪ್ರವಾಸೋದ್ಯಮ ನೀತಿ ಜಾರಿ : ರಾಜ್ಯದ ಆರ್ಥಿಕ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಗಳಿರುವ ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿಯವರು ತಮ್ಮ ಬಜೆಟ್‍ನಲ್ಲಿ ಹೆಚ್ಚು ಗಮನ ಹರಿಸಿದ್ದಾರೆ. ಪ್ರವಾಸೋದ್ಯಮ ಕ್ಷೇತ್ರಗಳಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಲು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ 2024-29 ರ ಸಾಲಿಗೆ ಪರಿಷ್ಕøತ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಕೊಪ್ಪಳದ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲ ಪ್ರವಾಸಿ ಸೌಲಭ್ಯಗಳಿಗೆ 100 ಕೋಟಿ, ಜಲಾಶಯಗಳ ಹಿನ್ನೀರು, ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಸಾಹಸ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವುದು, ಸಾಹಸ ಪ್ರವಾಸೋದ್ಯಮ ವನ್ನು ಉತ್ತೇಜಿಸಲು 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ಮತ್ತು ರೋಪ್ ವೇ ಸೌಲಭ್ಯ ಸೃಷ್ಟಿ ಮಾಡುವುದಾಗಿ ಘೋಷಿಸಿದ್ದಾರೆ.

* ಮಹಿಳೆಯರ ಸ್ವಾವಲಂಬನೆಗಾಗಿ ಕೆಫೆ ಸಂಜೀವಿನಿ : ಬೆಂಗಳೂರು,ಫೆ.16- ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿ ಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ. ವೆಚ್ಚ ಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದೆಂದು ಆಶ್ವಾಸನೆ ನೀಡಿದರು. ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. 2500 ಕಾಫಿ ಕಿಯೋನಿಕ್ಸ್‍ಗಳನ್ನ 25 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಿ ಇದರ ಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ಮಾಡಲಿದ್ದಾರೆ ಎಂದರು.

* ಮಹಿಳೆಯರಿಗೆ ರಾತ್ರಿ ತಂಗುವ ವ್ಯವಸ್ಥೆ : ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು ಐದು ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲಾಗುವುದು. ಸ್ಥಳೀಯ ಮಹಿಳಾ ಸ್ವಸಹಾಯ ಗುಂಪುಗಳ ಸಕ್ರಿಯ ಭಾಗವಹಿಸುವಹಿಕೆ ಮತ್ತು ನಾಯಕತ್ವದೊಂದಿಗೆ ಗ್ರಾಮಪಂಚಾಯ್ತಿ ಮಟ್ಟದ ಆಡಳಿತ ಬಲಪಡಿಸುವ ಉದ್ದೇಶದಿಂದ ಜಿಪಿ-ಎಸ್‍ಎಚ್‍ಜಿ ಒಗ್ಗೂಡಿಸುವ ನೀತಿಯನ್ನು ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ.

* ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಆಯವ್ಯಯದಲ್ಲಿ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನಿರಂತರ ನೀರಿನ ಸೌಲಭ್ಯಕ್ಕೆ 25 ಕೋಟಿ ರೂ. ಮೀಸಲಿಟ್ಟಿದ್ದಾರೆ. ಹಾಗೇ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೆ ನೀಟ್ ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮತ್ತು ಶಾಲಾ-ಕಾಲೇಜು ಕೊಠಡಿ, ದುರಸ್ತಿ, ಶೌಚಾಲಯ ನಿರ್ಮಾಣಕ್ಕೆ 850 ಕೋಟಿ ರೂಪಾಯಿಯನ್ನು ಮೀಸಲು ಇಡಲಾಗಿದೆ.

* ಶೀಘ್ರದಲ್ಲೆ ಶಿಕ್ಷಕರು, ಉಪನ್ಯಾಸಕರ ನೇಮಕ: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು, ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ ಅಥವಾ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತದೆ.

* 10 ಮಹಾನಗರಗಳ ಅಭಿವೃದ್ಧಿ : ಸಿಲಿಕಾನ್ ಸಿಟಿ ಬೆಂಗಳೂರಿನ ಮೇಲಿನ ಒತ್ತಡ ತಗ್ಗಿಸುವ ಉದ್ದೇಶದಿಂದ ರಾಜ್ಯದ ಇತರೆಡೆಗಳಲ್ಲಿ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಅವರು, 10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಎರಡು ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆಜಿಎಫ್, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳಲ್ಲಿ ಇಂಟಿಗ್ರೇಟೆಡ್ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‍ಶಿಪ್‍ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

* ವಿತ್ತೀಯ ಕೊರತೆ : ಮುಂದಿನ ಆರ್ಥಿಕ ವರ್ಷದಲ್ಲಿ 27,354 ಕೋಟಿ ರೂ.ಗಳನ್ನು ರಾಜಸ್ವ ಕೊರತೆ ಎಂದು ಹಾಗೂ 82,595 ಕೋಟಿ ರೂ.ಗಳನ್ನು ವಿತ್ತೀಯ ಕೊರತೆ ಎಂದು ಅಂದಾಜಿಸಲಾಗಿದೆ. ವಿತ್ತೀಯ ಕೊರತೆಯು ರಾಜ್ಯದ ಜಿಎಸ್‍ಡಿಪಿಯ ಶೇ.2.95 ರಷ್ಟಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಮುಂದಿನ ಆರ್ಥಿಕ ವರ್ಷಕ್ಕೆ ರಾಜ್ಯದ ಒಟ್ಟು ಹೊಣೆಗಾರಿಕೆ 6,65,095 ಕೋಟಿ ರೂ.ಗಳೆಂದು ಅಂದಾಜಿಸಲಾಗಿದ್ದು, ಬೃಹತ್ ಮೊತ್ತದ ಸಾಲವನ್ನು ಬಿಂಬಿಸಲಾಗಿದೆ. ಆದರೂ ಆರ್ಥಿಕ ಶಿಸ್ತಿನ ಮಿತಿ ಶೇ.25 ರೊಳಗೆ ಸಾಲದ ಮೊತ್ತವಿದ್ದು, ಒಟ್ಟು ಜಿಎಸ್‍ಡಿಪಿಯ ಶೇ.23.68 ರಷ್ಟಿದೆ ಎಂದು ತಿಳಿಸಿದ್ದಾರೆ.

* ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ : ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು. ಮುಂದಿನ ಸಾಲಿನಲ್ಲಿ ಒಳಿದ ಒಂಭತ್ತು ಜಿಲ್ಲೆಗಳಲ್ಲೂ ಸಹ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.

* 100 ತಾಲೂಕು ಆಸ್ಪತ್ರೆ : ಆನೇಕಲ್, ನೆಲಮಂಗಲ, ಹೊಸಕೋಟೆ, ಖಾನಪುರ, ಶಿರಹಟ್ಟಿ, ಎಳಂದೂರು ತಾಲೂಕುಗಳಲ್ಲಿ 100 ತಾಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಶಿಥಿಲಾವ್ಯಸ್ಥೆಯಲ್ಲಿರುವ ಆರೋಗ್ಯ ಕೇಂದ್ರವನ್ನು ಉನ್ನತೀಕರಣಕ್ಕಾಗಿ 75 ಕೋಟಿ ರೂ. ಅನುದಾನ ನೀಡಲಾಗುವುದು.

* ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ : ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಸೌಲಭ್ಯ ಕಾಮಗಾರಿಗಳನ್ನು 150 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಗ್ರಾಮೀಣ ಜನರಿಗೆ 24 ಗಂಟೆಯೂ ತುರ್ತು ಆರೋಗ್ಯ ಸೇವೆ ನೀಡಲು ಮುಂದಿನ ಎರಡು ವರ್ಷದಲ್ಲಿ 25 ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು. ಕಲ್ಯಾಣ ಕರ್ನಾಟಕ ಭಾಗದ 46 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ. ವೆಚ್ಚದಲ್ಲಿ ಕೆಕೆಆರ್‍ಡಿಬಿ ಮೂಲಕ ಸ್ಥಳ ಸ್ಥಾಪಿಸಲಾಗುವುದು.

* ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ : ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

* ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ : ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ 350 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಹೇಳಿದರು. ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 350 ಕೋಟಿ, ಮೈಸೂರಿನಲ್ಲಿರುವ 40 ಹಾಸಿಗೆ ಸಾಮಥ್ರ್ಯದ ನೆಪ್ರೊ ಯೂರಾಲಜಿ ಆಸ್ಪತ್ರೆ, 100 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು ಎಂದು ತಿಳಿಸಿದರು.

* ಬಿಜೆಪಿ ತೀವ್ರ ಆಕ್ಷೇಪ : ತಮ್ಮ 15ನೆಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭದಿಂದಲೇ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸುವ ವೇದಿಕೆಯನ್ನಾಗಿ ಮಾಡಿಕೊಂಡಿದ್ದು, ಬಿಜೆಪಿ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಜೆಟ್ ಮಂಡನೆ ಆರಂಭಿಸಿದ ಸಿದ್ದರಾಮಯ್ಯ ಆರಂಭದಿಂದಲೂ ಕೇಂದ್ರ ಸರ್ಕಾರ ಹಾಗೂ ಹಿಂದಿನ ಬಿಜೆಪಿ ರಾಜ್ಯ ಸರ್ಕಾರವನ್ನು ಟೀಕಿಸಲು ಆರಂಭಿಸಿದರು.

* ಆರಂಭದಲ್ಲೇ ಟೀಕೆ : ಸರ್ಕಾರದ ಯೋಜನೆಗಳು ಜನರ ಆಶೋತ್ತರಗಳನ್ನು ಪೂರೈಸಲು ರೂಪಿತವಾಗಿವೆ ಎಂದ ಸಿದ್ದರಾಮಯ್ಯ, ಬಡ ಜನರಿಗೆ ನ್ಯಾಯ ಒದಗಿಸುವ ಕಾರ್ಯಕ್ಕಾಗಿ ಸರ್ಕಾರದ ಯೋಜನೆಗಳು ಉಲ್ಲೇಖಿಸಿ ಆರಂಭದಲ್ಲಿಯೇ ಕೇಂದ್ರ ಸರ್ಕಾರದ ಯೋಜನೆಗಳನ್ನು ಆರಂಭದಲ್ಲೇ ಟೀಕಿಸಿದರು.


Share this with Friends

Related Post