ಬೆಂಗಳೂರು: ರಾಜ್ಯಾದ್ಯಂತ ಸ್ವಂತ ಮನೆ ನಿರ್ಮಿಸಿಕೊಂಡಿರುವ ಸಾರ್ವಜನಿಕರಿಗೆ ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ಪ್ರಕಟಿಸಿದೆ. ನಿಗದಿತ ಮಿತಿಯೊಳಗಿನ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಕಡ್ಡಾಯವಾಗಿದ್ದ ಸ್ವಾಧೀನಾನುಭವ ಪ್ರಮಾಣ ಪತ್ರ (Occupation Certificate – OC) ಸಲ್ಲಿಕೆಯಿಂದ ಇಂಧನ ಇಲಾಖೆಯು ಒಂದು ಬಾರಿಯ ಕ್ರಮವಾಗಿ ವಿನಾಯಿತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಿರ್ಣಯದ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಬಿದ್ದಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಎಲ್ಲಾ ಮಹಾನಗರ ಪಾಲಿಕೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿ ಸೇರಿದಂತೆ ಇಡೀ ರಾಜ್ಯಕ್ಕೆ ಇದು ಅನ್ವಯವಾಗಲಿದೆ.
ಅನ್ವಯವಾಗುವ ನಿಬಂಧನೆಗಳು:
2,400 ಚದರ ಅಡಿಗಳವರೆಗಿನ (+20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಜಿ+3 (G+3) ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಟಿಲ್ಟ್ ಪಾರ್ಕಿಂಗ್ ಜೊತೆಗೆ 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳಿಗೆ ಮಾತ್ರ ಈ ವಿನಾಯಿತಿ ಸಿಗಲಿದೆ. 2026ರ ಮೇ 31ರ ಒಳಗಾಗಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವ ಪ್ರಕರಣಗಳು, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಾಮಗಾರಿ ಪೂರ್ಣಗೊಳಿಸಿರುವ ಹಾಗೂ ಇದುವರೆಗೆ ಯಾವುದೇ ವಿದ್ಯುತ್ ಸಂಪರ್ಕ ಪಡೆಯದ ಕಟ್ಟಡಗಳು ಈ ಯೋಜನೆಯ ಲಾಭ ಪಡೆಯಬಹುದು.
ಅರ್ಜಿ ಸಲ್ಲಿಕೆಗೆ 15 ದಿನಗಳ ಗಡುವು:
ಈ ರಿಯಾಯಿತಿಯಡಿ ಹೊಸದಾಗಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಸೀಮಿತ ಅವಕಾಶ ನೀಡಲಾಗಿದೆ. ಆದೇಶ ಹೊರಬಿದ್ದ ಇಂದಿನಿಂದ (ಜೂನ್ 22, 2026) ಮುಂದಿನ 15 ದಿನಗಳವರೆಗೆ ಮಾತ್ರ ಹೊಸ ಅರ್ಜಿಗಳನ್ನು ಸಲ್ಲಿಸಲು ಇಂಧನ ಇಲಾಖೆಯು ಕಾಲಾವಕಾಶ ನಿಗದಿಪಡಿಸಿದೆ.
ಗ್ರಾಮೀಣ ಪ್ರದೇಶ ಮತ್ತು ರೈತರಿಗೆ ವಿಶೇಷ ಸವಲತ್ತು:
ಗ್ರಾಮೀಣ ಭಾಗದ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಮತ್ತೊಂದು ಪ್ರಮುಖ ನಿರ್ಧಾರ ಕೈಗೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ರೈತರು ವಾಸಿಸುವ ಮನೆಗಳು ಹಾಗೂ ಕೃಷಿ ಪೂರಕ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವಾಧೀನಾನುಭವ ಪ್ರಮಾಣಪತ್ರ (OC) ಪಡೆಯುವುದರಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ರೈತರು ವಾಸಿಸುವ ಮನೆ ಮತ್ತು ತೋಟದ ಮನೆ.
ಕೃಷಿ ಉಪಕರಣಗಳನ್ನು ಇಡುವ ಮನೆ.
ದನದ ಕೊಟ್ಟಿಗೆ ಹಾಗೂ ರೇಷ್ಮೆ ಗೂಡಿನ ಮನೆಗಳಿಗೆ ವಿನಾಯಿತಿ ನೀಡಲಾಗಿದೆ.
ಈ ಆದೇಶದ ಅನ್ವಯ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ಸಾರ್ವಜನಿಕರಿಗೆ ವಿದ್ಯುತ್ ಸಂಪರ್ಕ ನೀಡಲು ಅನುಸರಿಸಬೇಕಾದ ಸಾಮಾನ್ಯ ಮಾರ್ಗಸೂಚಿಗಳನ್ನು ಇಂಧನ ಇಲಾಖೆಯು ಪ್ರತ್ಯೇಕವಾಗಿ ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

