Wed. Nov 11th, 2026

ಎಸ್‌ಸಿ, ಎಸ್‌ಟಿ ಮೀಸಲಾತಿ ರಕ್ಷಣೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

Share this with Friends

ಬೆಂಗಳೂರು: ಪರಿಶಿಷ್ಟ ಜಾತಿ (SC) ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ (ST) ಮೀಸಲಾತಿಯನ್ನು ಶೇ.3 ರಿಂದ 7ಕ್ಕೆ ಹೆಚ್ಚಿಸಿದ್ದನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ (Special Leave Petition) ಸಲ್ಲಿಸಿದೆ.

ಅಕ್ಟೋಬರ್ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿತ್ತು. ಅದರಂತೆ, ಅಕ್ಟೋಬರ್ 27ರ ಸರ್ಕಾರಿ ಆದೇಶದ ಅನ್ವಯ ಹೈಕೋರ್ಟ್ ತೀರ್ಪು ಪ್ರಕಟವಾದ 16 ದಿನಗಳ ಒಳಗಾಗಿ ಅಂದರೆ ಅಕ್ಟೋಬರ್ 28ರಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ದಾಖಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಮೀಸಲಾತಿ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳು:

ಮೀಸಲಾತಿ ಹೆಚ್ಚಳಕ್ಕೆ ಶಾಶ್ವತ ಕಾನೂನು ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ 2025ರ ಡಿಸೆಂಬರ್ 18ರಂದು ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಅಲ್ಲದೆ, 2026ರ ಫೆಬ್ರವರಿಯಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಮಂಜೂರಾತಿ ನೀಡಲಾಗಿದ್ದು, ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಹೆಚ್ಚುವರಿ ಶೇ.6 ರಷ್ಟು ಹುದ್ದೆಗಳನ್ನು ಬ್ಯಾಕ್‌ಲಾಗ್‌ನಲ್ಲಿ ಕಾಯ್ದಿರಿಸಲಾಗಿದೆ. ಪರಿಶಿಷ್ಟ ಜಾತಿಗಳಲ್ಲಿನ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸಲು ಒಳಮೀಸಲಾತಿಯನ್ನೂ ಜಾರಿಗೊಳಿಸಲಾಗಿದೆ ಎಂದು ಸರ್ಕಾರ ವಿವರಿಸಿದೆ.

ಕಾನೂನು ರಕ್ಷಣೆ ವೈಫಲ್ಯದ ಕುರಿತು ಸರ್ಕಾರದ ಆರೋಪ:

ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗವು 2020ರ ಜುಲೈನಲ್ಲಿ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು ಮಾಡಿ, ಇದನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವಂತೆ ಸಲಹೆ ನೀಡಿತ್ತು. ಆದರೆ, ಹಿಂದಿನ ಬಿಜೆಪಿ ಸರ್ಕಾರವು 2023ರ ವಿಧಾನಸಭಾ ಚುನಾವಣೆಗೆ ಮುನ್ನ ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆ ಜಾರಿಗೊಳಿಸಿತೇ ಹೊರತು, ಸಂವಿಧಾನ ತಿದ್ದುಪಡಿ ಮೂಲಕ 9ನೇ ಅನುಸೂಚಿಗೆ ಸೇರಿಸುವ ಕೆಲಸ ಮಾಡಲಿಲ್ಲ ಎಂದು ಪ್ರಕಟಣೆಯಲ್ಲಿ ದೂರಲಾಗಿದೆ.

ರಾಷ್ಟ್ರೀಯ ಎಸ್‌ಸಿ ಮತ್ತು ಎಸ್‌ಟಿ ಆಯೋಗಗಳೊಂದಿಗೆ ಕಡ್ಡಾಯ ಸಮಾಲೋಚನೆ ನಡೆಸದೆ ಕಾನೂನು ಜಾರಿಗೊಳಿಸಿದ್ದರಿಂದಲೇ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಅಲ್ಲದೆ, ವಿಧಾನಸಭೆಯ ನಿರ್ಣಯದ ನಂತರವೂ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇದೆ ಎಂಬ ಕಾರಣ ನೀಡಿ ಕೇಂದ್ರ ಸರ್ಕಾರವು ಸಂವಿಧಾನ ತಿದ್ದುಪಡಿಯನ್ನು ಮುಂದೂಡಿದೆ. ಹೀಗಾಗಿ, ಸಮುದಾಯಗಳ ಹಕ್ಕುಗಳ ರಕ್ಷಣೆಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ಹಾಗೂ ಕೇಂದ್ರದೊಂದಿಗೆ ಸಂವಿಧಾನ ತಿದ್ದುಪಡಿಯ ಪ್ರಯತ್ನಗಳನ್ನು ಏಕಕಾಲಕ್ಕೆ ಮುಂದುವರಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪ್ರಮುಖ ಬೆಳವಣಿಗೆಗಳ ಹಿನ್ನೋಟ:

ಜುಲೈ 2020: ಮೀಸಲಾತಿ ಹೆಚ್ಚಳ ಮತ್ತು 9ನೇ ಅನುಸೂಚಿಗೆ ಸೇರಿಸಲು ನಾಗಮೋಹನ್ ದಾಸ್ ಆಯೋಗ ಶಿಫಾರಸು.

ಡಿ. 18, 2025: ಶೇ.56 ಮೀಸಲಾತಿಯನ್ನು 9ನೇ ಅನುಸೂಚಿಗೆ ಸೇರಿಸಲು ಕರ್ನಾಟಕ ವಿಧಾನಸಭೆಯಲ್ಲಿ ನಿರ್ಣಯ.

ಫೆಬ್ರವರಿ 2026: 56,432 ಹುದ್ದೆಗಳ ನೇಮಕಾತಿಗೆ ಅನುಮೋದನೆ; ಹೆಚ್ಚುವರಿ ಶೇ.6 ಹುದ್ದೆಗಳು ಬ್ಯಾಕ್‌ಲಾಗ್‌ನಲ್ಲಿ ಮೀಸಲು.

ಅ. 28, 2026: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರದಿಂದ SLP ಸಲ್ಲಿಕೆ.

 

 


Share this with Friends

Related Post