Wed. Nov 25th, 2026

ಜಿ.ಪಂ., ತಾ.ಪಂ. ಕ್ಷೇತ್ರಗಳ ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ: ಬಹುತೇಕ ಜನವರಿಯಲ್ಲಿ ಚುನಾವಣೆ ನಿರೀಕ್ಷೆ ಎಂದ ಸಚಿವ ಈಶ್ವರ ಖಂಡ್ರೆ

Share this with Friends

ಬೆಂಗಳೂರು: ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎದುರಾಗಿದ್ದ ಬಹುದೊಡ್ಡ ಅಡೆತಡೆ ನಿವಾರಣೆಯಾಗಿದ್ದು, ಜಿಲ್ಲಾ ಪಂಚಾಯಿತಿ (ಜಿ.ಪಂ.) ಮತ್ತು ತಾಲೂಕು ಪಂಚಾಯಿತಿ (ತಾ.ಪಂ.) ಕ್ಷೇತ್ರಗಳ ಮೀಸಲಾತಿ ಅಂತಿಮ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಮಂಗಳವಾರ (ನವೆಂಬರ್ 24) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೀಸಲಾತಿ ಪ್ರಕಟಣೆ ಹಾಗೂ ಚುನಾವಣಾ ಸಿದ್ಧತೆಗಳ ಕುರಿತು ಸಂಪೂರ್ಣ ಮಾಹಿತಿ ಹಂಚಿಕೊಂಡರು.

ಮೀಸಲಾತಿ ಅಧಿಸೂಚನೆಯ ಅಂಕಿ-ಅಂಶಗಳು:

ರಾಜ್ಯದ ಒಟ್ಟು 30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಹಾಗೂ 234 ತಾಲೂಕು ಪಂಚಾಯಿತಿಗಳ 3,580 ಸದಸ್ಯ ಸ್ಥಾನಗಳು ಸೇರಿದಂತೆ ಒಟ್ಟು 4,681 ಸ್ಥಾನಗಳಿಗೆ ನಿಯಮಾನುಸಾರ ಮೀಸಲಾತಿಯನ್ನು ಅಂತಿಮಗೊಳಿಸಿ ಸೋಮವಾರ ವಿಶೇಷ ರಾಜ್ಯಪತ್ರದ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಚಿವರು ವಿವರಿಸಿದರು. ಈ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಿದ ಬಳಿಕ ಸಾರ್ವಜನಿಕರಿಂದ ಸ್ವೀಕೃತವಾಗಿದ್ದ 2,900ಕ್ಕೂ ಹೆಚ್ಚು ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ, ವಿಲೇವಾರಿ ಮಾಡಿದ ನಂತರವೇ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಚುನಾವಣೆ ವಿಳಂಬಕ್ಕೆ ಕಾರಣವೇನು?

2022ರಲ್ಲಿಯೇ ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಆಡಳಿತಾವಧಿ ಪೂರ್ಣಗೊಂಡಿದ್ದರೂ ಹಿಂದಿನ ಸರ್ಕಾರ ಚುನಾವಣೆ ನಡೆಸಿರಲಿಲ್ಲ ಎಂದು ಈಶ್ವರ ಖಂಡ್ರೆ ಉಲ್ಲೇಖಿಸಿದರು. ಆ ಬಳಿಕ ನಮ್ಮ ಸರ್ಕಾರವು ಹಲವು ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳಾಗಿ ಮೇಲ್ದರ್ಜೆಗೇರಿಸಿದ್ದರಿಂದ ಮತ್ತು ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳು ನಗರಸಭೆ, ನಗರಪಾಲಿಕೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾದ ಕಾರಣ ಕ್ಷೇತ್ರಗಳ ಪುನರ್‌ವಿಂಗಡಣೆ ಅನಿವಾರ್ಯವಾಗಿತ್ತು. ಈ ಎಲ್ಲಾ ಕಾನೂನು ಮತ್ತು ತಾಂತ್ರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಮಯ ತಗುಲಿತು ಎಂದು ಅವರು ಸ್ಪಷ್ಟಪಡಿಸಿದರು.

2027ರ ಜನವರಿಯಲ್ಲಿ ಚುನಾವಣೆ ನಿರೀಕ್ಷೆ:

“ರಾಜ್ಯ ಸರ್ಕಾರವು ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟಿಸುವ ಮೂಲಕ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಪೂರ್ಣಗೊಳಿಸಿದೆ. ಈಗ ಚುನಾವಣೆ ನಡೆಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗದ ಮೇಲಿದೆ. ಆಯೋಗವು ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಲಿದ್ದು, ಬಹುತೇಕ ಮುಂಬರುವ 2027ರ ಜನವರಿ ತಿಂಗಳಲ್ಲಿ ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳು ನಡೆಯುವ ನಿರೀಕ್ಷೆಯಿದೆ” ಎಂದು ಸಚಿವರು ತಿಳಿಸಿದರು.

ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜು:

ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷವು ಸಂಪೂರ್ಣವಾಗಿ ಸನ್ನದ್ಧವಾಗಿದೆ. ಮಹಾತ್ಮ ಗಾಂಧೀಜಿಯವರ ‘ಗ್ರಾಮ ಸ್ವರಾಜ್ಯ’ದ ಆಶಯದೊಂದಿಗೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು


Share this with Friends

Related Post