Sat. Aug 29th, 2026

ಕಸ್ತೂರಿ ರಂಗನ್ ವರದಿ ಜಾರಿ ಇಲ್ಲ, ರಾಜ್ಯದ ಹಿತ ರಕ್ಷಣೆಗಾಗಿ ವಿಶೇಷ ಅಧಿವೇಶನ: ಸಚಿವ ಮಧು ಬಂಗಾರಪ್ಪ

Share this with Friends

ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತ ಕಸ್ತೂರಿ ರಂಗನ್‌ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಲು ಬಿಡುವುದಿಲ್ಲ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಗೃಹ ಕಚೇರಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗಾಗಿ ತಮ್ಮ ತಂದೆ ಎಸ್. ಬಂಗಾರಪ್ಪ ಅವರು ವಿಶೇಷ ಅಧಿವೇಶನ ಕರೆದಿದ್ದನ್ನು ಸ್ಮರಿಸಿದರು. ಅವರ ಹಾದಿಯಲ್ಲೇ ನಡೆದು ಈಗ ಕಸ್ತೂರಿ ರಂಗನ್ ವರದಿ ವಿಚಾರದಲ್ಲೂ ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರ ಕ್ರಮ ಸ್ವಾಗತಾರ್ಹ ಎಂದರು.

ಬಿಜೆಪಿ ನಾಯಕರ ವಿರುದ್ಧ ಆಕ್ರೋಶ:

ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಬಿಜೆಪಿ ನಾಯಕರು ಹಾಗೂ ಸಂಸದರು ರಾಜಕೀಯ ಡ್ರಾಮಾ ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಈ ಕರಡು ಅಧಿಸೂಚನೆಯನ್ನು ಹೊರಡಿಸಿರುವುದು ರಾಜ್ಯ ಸರ್ಕಾರವಲ್ಲ, ಬದಲಿಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ. ಬಿಜೆಪಿ ನಾಯಕರಿಗೆ ರಾಜ್ಯದ ಹಿತಾಸಕ್ತಿಯ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಅವರು ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕಿತ್ತು ಎಂದು ಸಚಿವರು ಸವಾಲು ಹಾಕಿದರು.

1,576 ಗ್ರಾಮಗಳ ವ್ಯಾಪ್ತಿ:

ಕೇಂದ್ರ ಸರ್ಕಾರ 7ನೇ ಬಾರಿಗೆ ಹೊರಡಿಸಿರುವ ಹೊಸ ಕರಡು ಅಧಿಸೂಚನೆಯಲ್ಲಿ ಕರ್ನಾಟಕದ 1,576 ಗ್ರಾಮಗಳ ವ್ಯಾಪ್ತಿಯ ಒಟ್ಟು 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ (ESA) ಎಂದು ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 484 ಗ್ರಾಮಗಳು ಸೇರಿವೆ. ಜನವಸತಿ ಮತ್ತು ಕೃಷಿ ಭೂಮಿಯನ್ನು ಈ ವ್ಯಾಪ್ತಿಗೆ ತರಲು ಪ್ರಸ್ತಾಪಿಸಿರುವುದರಿಂದ ಮಲೆನಾಡಿನ ಜನರಲ್ಲಿ ಆತಂಕ ಮೂಡುವುದು ಸಹಜ. ಆದರೆ ಯಾರೂ ಭಯಪಡುವ ಅಗತ್ಯವಿಲ್ಲ, ಜನರ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಭರವಸೆ ನೀಡಿದರು.

ಕೇಂದ್ರದ ನಡೆ ಖಂಡನೀಯ:

ರಾಜ್ಯ ಸರ್ಕಾರವು ಈಗಾಗಲೇ ಈ ವರದಿಯನ್ನು ವಿಧಾನಸಭೆಯಲ್ಲಿ ತಿರಸ್ಕರಿಸಿ ಕೇಂದ್ರಕ್ಕೆ ಅಧಿಕೃತವಾಗಿ ನಿಲುವು ತಿಳಿಸಿದೆ. ಆದರೂ ಕೇಂದ್ರ ಸರ್ಕಾರ ಮತ್ತೆ ಹೊಸ ಕರಡು ಅಧಿಸೂಚನೆ ಪ್ರಕಟಿಸಿರುವುದು ಖಂಡನೀಯ. ರಾಜ್ಯಕ್ಕೆ ಅನಾನುಕೂಲವಾಗುವ ಇಂತಹ ಸಂಗತಿಗಳನ್ನು ಕೇಂದ್ರಕ್ಕೆ ತಲುಪಿಸಿ ಸರಿಪಡಿಸಬೇಕಾದ ಜವಾಬ್ದಾರಿ ಬಿಜೆಪಿ ಸಂಸದರ ಮೇಲಿದೆ. ರಾಜ್ಯದ ಹಿತಾಸಕ್ತಿ ಕಾಯುವಲ್ಲಿ ಅವರು ಪ್ರಾಮಾಣಿಕವಾಗಿ ನಡೆದುಕೊಳ್ಳಬೇಕು ಎಂದು ಮಧು ಬಂಗಾರಪ್ಪ ಒತ್ತಾಯಿಸಿದರು.

 


Share this with Friends

Related Post