Fri. Nov 1st, 2024

ಗಂಗಾರತಿ ಮಾದರಿಯಲ್ಲೇ ಕಾವೇರಿ ಆರತಿಗೆ ಮುಂದಾದ ರಾಜ್ಯ ಸರ್ಕಾರ

Share this with Friends

ಹರಿದ್ವಾರ: ಉತ್ತರ ಭಾರತದಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲೇ ನಮ್ಮ ನಾಡಿನ ಕಾವೇರಿ ನದಿಯಲ್ಲಿ ಕಾವೇರಿ ಆರತಿ ನಡೆಸಲು ಸರ್ಕಾರ ಮುಂದಾಗಿದೆ.

ಈ ಬಗ್ಗೆ ಅಧ್ಯಯನ ನಡೆಸಲು ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಹರಿದ್ವಾರ ಮತ್ತು ವಾರಾಣಾಸಿಗೆ ಭೇಟಿ ನೀಡಿದೆ.

ಶುಕ್ರವಾರ ಹರಿದ್ವಾರಕ್ಕೆ ತೆರಳಿದ ನಿಯೋಗ ವಿಶೇಷ ಗಂಗಾರತಿಯಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ, ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಜೊತೆ ಮಾತುಕತೆ ನಡೆಸಿ,ಅಗತ್ಯ ಮಾಹಿತಿ ಪಡೆದುಕೊಂಡರು.

ನಂತರ ಸಚಿವ ಚಲುವರಾಯಸ್ವಾಮಿ ಮಾಧ್ಯಮದೊಂದಿಗೆ ಮಾತನಾಡಿ,ಕಾವೇರಿ ಆರತಿಗೆ ಎರಡು, ಮೂರು ಸ್ಥಳಗಳನ್ನು ಗುರುತಿಸಲಾಗಿದೆ, ಅಂತಿಮಗೊಂಡ ಸ್ಥಳದಲ್ಲಿ ಆರತಿಗಾಗಿ ಸೋಪಾನೆಕಟ್ಟೆ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಹರಿದ್ವಾರದಲ್ಲಿ ನಿತ್ಯ ಗಂಗಾ ಆರತಿ ನಡೆಯುತ್ತಿದೆ. ರಾಜ್ಯದಲ್ಲಿ ವಾರದಲ್ಲಿ ಎರಡು ಅಥವಾ ಮೂರು ದಿನ ಆರತಿ ಮಾಡಬೇಕೆ ಅಥವಾ ಪ್ರತಿದಿನ ಆರತಿ ನಡೆಸಬೇಕೇ ಎಂಬುದರ ಬಗ್ಗೆ ಸಮಿತಿ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.

ಆರಂಭದಲ್ಲಿ ಹರಿದ್ವಾರ ಮತ್ತು ವಾರಾಣಸಿಯ ಸಾಧು, ಸಂತರನ್ನು ಆಹ್ವಾನಿಸಿ ಅವರಿಂದ ಕಾವೇರಿ ಆರತಿ ಮಾಡಿಸಲಾಗುತ್ತದೆ. ನಂತರ ಅವರಿಂದಲೇ ಸ್ಥಳೀಯ ವೈದಿಕರಿಗೆ ತರಬೇತಿ ಕೊಡಿಸಿ ಕಾವೇರಿ ಆರತಿ ಮುಂದುವರಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಹರಿದ್ವಾರದ ಗಂಗಾ‌ ಮಹಾಸಭಾದ ಸಮಿತಿಯ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಗಂಗಾ ಆರತಿ ಇತಿಹಾಸದ ಬಗ್ಗೆ ಮಾಹಿತಿ ನೀಡಿ ಕೆಲವು ಸಲಹೆಗಳನ್ನು ಕೊಟ್ಟಿದ್ದಾರೆ ಎಂದು ಸಚಿವರು ತಿಳಿಸಿದರು.

ಭಾನುವಾರ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವುದರ ಜೊತೆಗೆ ಘಾಟ್‌ನಲ್ಲಿ ಸಂಚರಿಸಿ, ಅಲ್ಲಿನ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಚಲುವರಸಯಸ್ವಾಮಿ ವಿವರಿಸಿದರು.

ಸುಮಾರು 5 ಕೋಟಿ ರೂ.ವೆಚ್ಚದಲ್ಲಿ ಕಾವೇರಿಗೆ ಆರತಿ ಯೋಜನೆ ರೂಪಿಸಲಾಗುತ್ತಿದ್ದು, ಅಧ್ಯಯನ ನಡೆಸಲು ಚಾಮರಾಜನಗರ, ಮೈಸೂರು, ಮಂಡ್ಯ, ಮಡಿಕೇರಿ ಭಾಗದ ಶಾಸಕರ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.


Share this with Friends

Related Post