ನವದೆಹಲಿ,ಜುಲೈ.1: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿದರು.
ಈ ವೇಳೆ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ನೆರವು ನೀಡಬೇಕು ಎಂಬುದೂ ಸೇರಿದಂತೆ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಲಕ್ಷ್ಮೀ ಹೆಬ್ಬಾಳ್ಕರ್ ಸಲ್ಲಿಸಿದರು.
ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು, ಮಕ್ಕಳಿಗೆ ಪೌಷ್ಠಿಕ ಆಹಾರ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಅಂಗನವಾಡಿ ಕೇಂದ್ರಗಳಲ್ಲೇ ಎಲ್ ಕೆಜಿ, ಯುಕೆಜಿ ನೀಡಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಕೇಂದ್ರ ಸಹಭಾಗಿತ್ವದ ವಿವಿಧ ಯೋಜನೆಗಳ ಜಾರಿಗೆ ರಾಜ್ಯಕ್ಕೆ ಬಿಡುಗಡೆ ಆಗಬೇಕಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡಬೇಕು, ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಅಕ್ಕಿ, ಗೋಧಿಯನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಲಕ್ಷ್ಮೀ ಹೆಬ್ಬಾಳ್ಕರ್ ಕೋರಿದರು.
ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೌಕರ್ಯ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನದ ನೆರವು ಅಗತ್ಯವಿದೆ ಎಂದು ಕೇಂದ್ರ ಸಚಿವರಿಗೆ ಮನದಟ್ಟು ಮಾಡಿದರು. ಈ ವೇಳೆ ಅನ್ನಪೂರ್ಣ ದೇವಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರೆಂದು ಲಕ್ಷ್ಮೀ ತಿಳಿಸಿದ್ದಾರೆ.