Sat. Nov 2nd, 2024

ಅಂಗನವಾಡಿ ಕೇಂದ್ರಗಳಲ್ಲೇ ಎಲ್ ಕೆ ಜಿ,ಯುಕೆಜಿ ಪ್ರಾರಂಭ:ಲಕ್ಷ್ಮಿ ಹೆಬ್ಬಾಳ್ಕರ್

Share this with Friends

ಬೆಂಗಳೂರು, ಜು.14 : ಸಧ್ಯದಲ್ಲೇ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವಪ್ರಾಥಮಿಕ ಶಾಲೆ ಆರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಭಾಗವಾಗವಾಗಿ ಜುಲೈ 22 ರಂದು 250 ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ ತರಗತಿಗಳನ್ನು ಆರಂಭಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಎಲ್.ಕೆ.ಜಿ, ಯು.ಕೆ.ಜಿ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ನಮ್ಮ ಇಲಾಖೆಯ ಉದ್ದೇಶ, ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ, ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದು ತಿಳಿಸಿದರು.

ಕಳೆದ 50 ವರ್ಷಗಳಿಂದ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬಂದಿವೆ, ಇನ್ನು ಮುಂದೆ ಇವು ಗವರ್ನಮೆಂಟ್ ಮಾಂಟೆಸ್ಸರಿ ಆಗಿ ಬದಲಾಗಲಿವೆ, ಇತರ ಶಾಲೆಗಳಿಗಿಂತ ನಮ್ಮ ಅಂಗನವಾಡಿ ಕೇಂದ್ರದ ಮಕ್ಕಳು ಹೆಚ್ಚು ಸುರಕ್ಷಿತವಾಗಿರುತ್ತವೆ ಎಂದು ಲಕ್ಷ್ಮೀ ಹೆಬ್ಬಾಳಕರ್ ವಿವರಿಸಿದರು.

ಗುಣಮಟ್ಟದ ಶಿಕ್ಷಣದ ಬಗ್ಗೆ ಶಿಕ್ಷಣ ಇಲಾಖೆ ಯೋಚಿಸುವುದು ತಪ್ಪಲ್ಲ, ಆದರೆ, ಅಂಗನವಾಡಿಗೆ ಪೆಟ್ಟು ಬೀಳಬಾರದು, ನಾವೇ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗೋಣ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಇಂಥ ಶಿಬಿರಗಳನ್ನು ಆಯೋಜಿಸಿ, ಗುಣಮಟ್ಟಕ್ಕೆ ಆದ್ಯತೆ ನೀಡೋಣ ಎಂದು ಕರೆ ನೀಡಿದರು.

ಅಂಗನವಾಡಿ ಕಾರ್ಯಕರ್ತರಿಗೆ ಇನ್ಯುರೆನ್ಸ್ ನೀಡುವ ಕುರಿತು ಶೀಘ್ರವೇ ತೀರ್ಮಾನಿಸಲಾಗುವುದು, ಗೌರವ ಧನ ಹೆಚ್ಚಳದ ಬಗ್ಗೆ ಕೂಡಾ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ಕಾರ್ಯರೂಪಕ್ಕೆ ತರುವ ಕೆಲಸ ಮಾಡಿತ್ತೇನೆ ಎಂದು ಸಚಿವರು ಭರವಸೆ ನೀಡಿದರು.

ಸಮಾರಂಭದಲ್ಲಿ ಹಂಪಿ ಕನ್ನಡ ವಿ.ವಿಯ ನಿವೃತ್ತ ಪ್ರಾಧ್ಯಾಪಕ ಟಿ.ಆರ್.ಚಂದ್ರಶೇಖರ್, ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮೀ ಮತ್ತಿತರರು ಪಾಲ್ಗೊಂಡಿದ್ದರು.


Share this with Friends

Related Post