ಬೆಂಗಳೂರು: ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಮಹಾತ್ಮಗಾಂಧಿ ಹೆಸರನ್ನು ತೆಗೆಯುತ್ತಿದರುವ ಬಿಜೆಪಿಗೆ ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧಿ ಚಿತ್ರವನ್ನು ತೆಗೆಯಿರಿ ನೋಡೋಣ ಎಂದು ಬಿಜೆಪಿಗೆ ಡಿಸಿಎಂ ಡಿಕೆ ಶಿವಕುಮಾರ್ ನೇರ ಸವಾಲೆಸೆದಿದ್ದಾರೆ.
ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ನಡೆದ ಸತ್ಯಮೇವ ಜಯತೆ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿ ನಾವು ತಂದ ಯೋಜನೆಯಲ್ಲಿ ಈ ಸರ್ಕಾರ ಗಾಂಧೀಜಿ ಅವರ ಹೆಸರು ತೆಗೆಯುತ್ತಿದೆ. ಬಿಜೆಪಿಗೆ ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧಿ ಚಿತ್ರವನ್ನು ತೆಗೆಯಲಿ. ಮಹಾತ್ಮಾ ಗಾಂಧಿ ಅವರ ಹೆಸರು ಅಜರಾಮರ” ಎಂದು ತಿಳಿಸಿದರು.
ಮಹತ್ಮಾ ಗಾಂಧೀಜಿ ಅವರ ಹೆಸರಿನಲ್ಲಿ ನಮ್ಮ ಸರ್ಕಾರ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದಿತು. ಈ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ಭೂಮಿ ಮಟ್ಟ ಮಾಡಲು, ಕೊಟ್ಟಿಗೆ ನಿರ್ಮಾಣ, ಆಶ್ರಯಮನೆ ನಿರ್ಮಾಣ ಮಾಡಲು ಸರ್ಕಾರ ಕೂಲಿ ನೀಡುತ್ತದೆ. ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಮನಮೋಹನ್ ಸಿಂಗ್ ಅವರು ಈ ಐತಿಹಾಸಿಕ ತೀರ್ಮಾನ ಕೈಗೊಂಡರೆ ಇವರು ಬಂದು ಅದರಲ್ಲಿನ ಹೆಸರು ಬದಲಾಯಿಸುತ್ತಿದ್ದಾರೆ,“ದೇಶದ ಐಕ್ಯತೆ ಹಾಗೂ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ನಾಥೂರಾಮ್ ಗೋಡ್ಸೆ ಪಕ್ಷದವರು ತೆಗೆಯಲು ಮುಂದಾಗಿದ್ದಾರೆ. ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಗಿ ಮಾಡಲು ಕಾಂಗ್ರೆಸಿಗರು ಎಂದಿಗೂ ಬಿಡುವುದಿಲ್ಲ” ಎಂದು ಹೋರಾಟದ ಎಚ್ಚರಿಕೆಯ ಸಂದೇಶ ರವಾನಿಸಿದರು.
ಬಿಜೆಪಿಗರು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಬೇಡಿ:
“ಬಿಜೆಪಿಗರು ಗಾಂಧಿ ಪ್ರತಿಮೆ ಮುಂದೆ ನಿಂತು ಹೋರಾಟ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಹಾಗೂ ಶಾಸಕರು ಇನ್ನು ಮುಂದೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಬಾರದು. ಬಡವರಿಗೆ ಉದ್ಯೋಗ ನೀಡುವ ಯೋಜನೆಯ ಹೆಸರಿನಿಂದ ನೀವು ಗಾಂಧೀಜಿ ಅವರ ಹೆಸರು ತೆಗೆಯುತ್ತಿದ್ದೀರಿ ಎಂದರೆ ನೀವು ದೇಶದ್ರೋಹಿಗಳು. ಬೇರೆ ದೇಶದ ನಾಯಕರು ನಮ್ಮ ದೇಶಕ್ಕೆ ಬಂದರೆ ಮೊದಲು ಅವರು ಗಾಂಧಿ ಸಮಾಧಿಗೆ ಹೋಗಿ ಪೂಜೆ ಮಾಡುತ್ತಾರೆ. ಗಾಂಧಿ ಭಾವಚಿತ್ರಕ್ಕೆ ನಮಿಸುತ್ತಾರೆ. ಆದರೆ ಗಾಂಧಿ ಅವರ ಹೆಸರು ತೆಗೆಯುವ ಮೂಲಕ ಮತ್ತೊಮ್ಮೆ ಗಾಂಧಿ ಅವರನ್ನು ಕೊಲ್ಲುತ್ತಿದ್ದೀರಿ ಎಂದು ಟೀಕಿಸಿದರು.
“ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನಾನು ಹಾಗೂ ನನ್ನ ಸಹೋದರ ಡಿ.ಕೆ. ಸುರೇಶ್ ದೇಣಿಗೆ ನೀಡಿದ್ದೇವೆ. ಶಾಮನೂರು ಶಿವಶಂಕರಪ್ಪ ಅವರು ಕೊಡಿಸಿದ್ದಾರೆ. ನಮ್ಮೆಲ್ಲರಿಗೂ ನೋಟೀಸ್ ನೀಡಿದ್ದಾರೆ. ನಾವು ಇದನ್ನು ಎದುರಿಸುತ್ತೇವೆ. ನಾವೆಲ್ಲರೂ ಕಾಂಗ್ರೆಸಿಗರು. ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಮ್ಮ ಶಾಸಕರು ಪ್ರತಿ ತಿಂಗಳು ತಮ್ಮ ವೇತನದಲ್ಲಿ 25 ಸಾವಿರ ನೀಡುತ್ತಿದ್ದಾರೆ. ಹೀಗೆ ಪಕ್ಷಕ್ಕೆ ದೇಣಿಗೆ ಕೊಟ್ಟವರ ಮೇಲೆ ಪ್ರಕರಣ ದಾಖಲಿಸಲು ಸಾಧ್ಯವೇ? ಅದೇ ರೀತಿ ನ್ಯಾಷನಲ್ ಹೆರಾಲ್ಡ್ ಆಸ್ತಿ ಉಳಿಸಿಕೊಳ್ಳಲು ಸುಮಾರು 100 ಕೋಟಿಯಷ್ಟು ಹಣವನ್ನು ಕಾಂಗ್ರೆಸಿಗರು ನೀಡಿದರು. ಈ ಹಣ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಖಾತೆಗೆ ಹಣ ಹೋಗಿಲ್ಲ. ಆದರೂ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ್ದಾರೆ” ಎಂದು ಕಿಡಿಕಾರಿದರು.
ಈ ದೇಶಕ್ಕಾಗಿ ತಮ್ಮ ಆಸ್ತಿ, ಅಧಿಕಾರ, ಪ್ರಾಣವನ್ನು ತ್ಯಾಗ ಮಾಡಿದವರು ಯಾರಾದರೂ ಇದ್ದರೆ ಅದು ಗಾಂಧಿ ಕುಟುಂಬದವರು. ನೆಹರು ಅವರು ಆಸ್ತಿ ತ್ಯಾಗ ಮಾಡಿದರೆ, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅಧಿಕಾರ ತ್ಯಾಗ ಮಾಡಿದ್ದಾರೆ. ಕಾಂಗ್ರೆಸಿಗರಿಗೆ ಮಾತ್ರ ಈ ತ್ರಿವರ್ಣ ಧ್ವಜ ಧರಿಸುವ ಹಕ್ಕಿದೆ ಎಂದರು.

