Fri. Nov 13th, 2026

ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.100 ಫಲಿತಾಂಶಕ್ಕೆ ಶಿಕ್ಷಕರು ಪಣತೊಡಲಿ: ಸಚಿವ ಮಧು ಬಂಗಾರಪ್ಪ ಕರೆ

Share this with Friends

ಧಾರವಾಡ: ಶಿಕ್ಷಕರ ವಿಶೇಷ ಶ್ರಮದಿಂದ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.98.08 ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.92.25ರಷ್ಟು ಸಾರ್ವಕಾಲಿಕ ಫಲಿತಾಂಶ ದಾಖಲಾಗಿದೆ. ಈ ಬಾರಿ ಫಲಿತಾಂಶವನ್ನು ಶೇ.100ಕ್ಕೆ ಕೊಂಡೊಯ್ಯುವ ಗುರಿಯೊಂದಿಗೆ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಕರೆ ನೀಡಿದ್ದಾರೆ.

ಧಾರವಾಡದ ಐಐಟಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಯ ರಾಜ್ಯಮಟ್ಟದ ‘ಮಿಷನ್-60+’ ಕಾರ್ಯಕ್ರಮ ಹಾಗೂ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾಡೆಲ್ ಪ್ರಶ್ನೆಪತ್ರಿಕೆಗಳ ಅಭ್ಯಾಸಕ್ಕೆ ಒತ್ತು:

ಹಿಂದಿನ ವರ್ಷದ ಪ್ರಶ್ನೆಪತ್ರಿಕೆಗಳನ್ನು ವಿಶ್ಲೇಷಿಸಿ, ವಿದ್ಯಾರ್ಥಿಗಳಿಂದ ಮಾದರಿ (ಮಾಡೆಲ್) ಪ್ರಶ್ನೆಪತ್ರಿಕೆಗಳನ್ನು ಬಿಡಿಸುವ ಅಭ್ಯಾಸ ಮಾಡಿಸುವುದರಿಂದ ಉತ್ತಮ ಅಂಕ ಗಳಿಸಲು ಸಾಧ್ಯವಿದೆ ಎಂದು ಪೋಷಕರು ಮತ್ತು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ. ಪರೀಕ್ಷೆಗೆ ಇನ್ನೂ ಸಾಕಷ್ಟು ಕಾಲಾವಕಾಶವಿರುವುದರಿಂದ ಈ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದು ಸಚಿವರು ತಿಳಿಸಿದರು. ಅಲ್ಲದೆ, ಮಕ್ಕಳಲ್ಲಿ ಕೇವಲ ಪಠ್ಯ ಪ್ರತಿಭೆ ಮಾತ್ರವಲ್ಲದೆ ಕ್ರೀಡೆ, ಸಂಗೀತ, ವಿಜ್ಞಾನ ಮತ್ತು ರಂಗಭೂಮಿ ಪ್ರತಿಭೆಗಳನ್ನೂ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

ಯಾವುದೇ ಮಗು ಪರೀಕ್ಷೆಯಿಂದ ವಂಚಿತವಾಗಬಾರದು:

ಕಳೆದ ಬಾರಿ ಸುಮಾರು 60 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವರು, ಕೌಟುಂಬಿಕ ಅಥವಾ ವೈಯಕ್ತಿಕ ಕಾರಣಗಳಿಂದ ಯಾವುದೇ ಮಗು ಪರೀಕ್ಷೆಯಿಂದ ವಂಚಿತವಾಗದಂತೆ ಶಿಕ್ಷಕರು ಮತ್ತು ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚಿಸಿದರು. ನಕಲು ತಡೆಗಟ್ಟಲು ರಾಜ್ಯದಲ್ಲಿ ದೇಶದಲ್ಲೇ ಮೊದಲ ಬಾರಿಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ನಮ್ಮ ಎರಡು ಪರೀಕ್ಷೆಗಳ ಮಾದರಿಯನ್ನು ಕೇಂದ್ರ ಸರ್ಕಾರವೂ ಅಳವಡಿಸಿಕೊಳ್ಳುತ್ತಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಮಾಜಿ ಸಿಎಂ ಎಸ್. ಬಂಗಾರಪ್ಪ ಹಾಗೂ ಹಾಲಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಸ್ಥಾನಕ್ಕೇರಿದವರು ಎಂದು ಸ್ಮರಿಸಿದ ಸಚಿವರು, ಶಿಕ್ಷಕರ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಪಿಯು ಇಲಾಖೆ ನಿರ್ದೇಶಕ ಎಸ್. ಭರತ್ ಸೇರಿದಂತೆ ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿದ್ದರು.

ಏನಿದು ‘ಮಿಷನ್-60+’ ಯೋಜನೆ?

ಕಳೆದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಶಿಕ್ಷಣ ಇಲಾಖೆಯು ‘ಮಿಷನ್-40+’ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿತ್ತು. ಇದೀಗ 2026-27ನೇ ಸಾಲಿನಲ್ಲಿ ಅದನ್ನು ಮೇಲ್ದರ್ಜೆಗೇರಿಸಿ ‘ಮಿಷನ್-60+’ ಕಾರ್ಯಕ್ರಮ ರೂಪಿಸಲಾಗಿದೆ. ಪ್ರತಿ ವಿದ್ಯಾರ್ಥಿಯೂ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚಿನ ಅಂಕ ಗಳಿಸುವಂತೆ ಸಜ್ಜುಗೊಳಿಸುವುದು ಹಾಗೂ ಶಾಲಾ-ಕಾಲೇಜುಗಳಲ್ಲಿ ಶೇ.100ರಷ್ಟು ಉತ್ತೀರ್ಣ ಫಲಿತಾಂಶ ದಾಖಲಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

 


Share this with Friends

Related Post