ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಲಯ ಅರಣ್ಯಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಕಟ್ಟಡವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಇಂದು ಉದ್ಘಾಟಿಸಿದರು. ಇದೇ ವೇಳೆ ಕರ್ತವ್ಯದ ಅವಧಿಯಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶಗಳನ್ನು ಗುರುತಿಸುವಲ್ಲಿ ಭಾರಿ ಲೋಪದೋಷಗಳು ನಡೆದಿವೆ. ಇದರಿಂದಾಗಿ ಸಾರ್ವಜನಿಕರು ತೀವ್ರ ಆರ್ಥಿಕ ಹಾಗೂ ಸಾಮಾಜಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸಾರ್ವಜನಿಕ ಆಸ್ಪತ್ರೆಗಳು, ಶಾಲೆಗಳು, ಸರ್ಕಾರಿ ಕಟ್ಟಡಗಳು, ಅಂಗನವಾಡಿಗಳು ಹಾಗೂ ಸಾರ್ವಜನಿಕರ ಪಟ್ಟಾ ಭೂಮಿಗಳು ಸಹ ಡೀಮ್ಡ್ ಅರಣ್ಯ ವ್ಯಾಪ್ತಿಗೆ ಸೇರಿ ಹೋಗಿವೆ. ಈ ಗಂಭೀರ ಗೊಂದಲವನ್ನು ಸರಿಪಡಿಸಲು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಎಂದರು.
ಈ ನಿಟ್ಟಿನಲ್ಲಿ ಡೀಮ್ಡ್ ಅರಣ್ಯ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸರ್ವೋನ್ನತ ನ್ಯಾಯಾಲಯಕ್ಕೆ (ಸುಪ್ರೀಂ ಕೋರ್ಟ್) ಮರು ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಈಗಾಗಲೇ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಿಬ್ಬಂದಿ ಸುರಕ್ಷತೆಗೆ ಆದ್ಯತೆ:
ಅರಣ್ಯ ರಕ್ಷಣೆಯಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುವ ತಳಮಟ್ಟದ ಸಿಬ್ಬಂದಿಯ ಪಾತ್ರ ಅತ್ಯಂತ ದೊಡ್ಡದಾಗಿದೆ. ಅವರ ಸುರಕ್ಷತೆಗಾಗಿ ಅಗತ್ಯವಿರುವ ಆಧುನಿಕ ತಾಂತ್ರಿಕ ಉಪಕರಣಗಳು, ಮಳೆ ಜಾಕೆಟ್ ಹಾಗೂ ಗುಣಮಟ್ಟದ ಶೂಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರೊಂದಿಗೆ ಸಿಬ್ಬಂದಿಗೆ ಅಪಾಯಭತ್ಯೆ (ರಿಸ್ಕ್ ಅಲೋವೆನ್ಸ್) ಮತ್ತು ವಸತಿ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಶೀಘ್ರದಲ್ಲೇ ಪರಿಶೀಲನೆ ನಡೆಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಪರಿಸರ ಜಾಗೃತಿಯ ಸಂಕೇತವಾಗಿ ಕಚೇರಿ ಆವರಣದಲ್ಲಿ ಸಚಿವರು ಸಸಿ ನೆಟ್ಟರು. ಕಾರ್ಕಳದ ಕಾರ್ಯಕ್ರಮಗಳ ಬಳಿಕ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಸಚಿವರು, ರಾಜ್ಯದಲ್ಲಿ ಉತ್ತಮ ಮಳೆ-ಬೆಳೆಯಾಗಿ ಜನರಲ್ಲಿ ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು.

