ಬೆಂಗಳೂರು,ಜೂನ್.3: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಸಚಿವ ನಾಗೇಂದ್ರ ಅವರ ರಾಜಿನಾಮೆಯನ್ನು ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ನಂತರ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.
ಹಗರಣಕ್ಕೆ ಸಂಬಂಧಪಟ್ಟ ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆಯಲ್ಲ ಎಂಬ ಪ್ರಶ್ನೆಗೆ ನಮಗೆ ಯಾರೂ ಯಾವ ಬೆದರಿಕೆಯನ್ನೂ ಹಾಕಿಲ್ಲ ಎಂದು ಸಿಎಂ ಸ್ಪಷ್ಟ ಪಡಿಸಿದರು.
ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ನಾಯಕರು ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಜೂನ್ 6 ರವರೆಗೆ ಗಡುವು ನೀಡಿದ್ದಾರಲ್ಲಾ ಎಂಬ ಇನ್ನೊಂದು ಪ್ರಶ್ನೆಗೆ, ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದು ಸಿಎಂ ಉತ್ತರಿಸಿದರು.
ನಮ್ಮ ಅಭ್ಯರ್ಥಿಗಳು ಗೆಲ್ಲಲು 19 ರಿಂದ 20 ಮತಗಳು ಅಗತ್ಯವಿದೆ, ನಾಮಪತ್ರಗಳ ಪರಿಶೀಲನೆಯ ನಂತರ ತಿಳಿಯಲಿದೆ. ಒಂದು ವೇಳೆ ಜಾಸ್ತಿಯಾದರೆ ಚುನಾವಣೆ ನಡೆಯಬೇಕು, ಚುನಾವಣೆ ನಡೆದರೂ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಒಳ್ಳೆ ಮಳೆಯಾಗಿದ್ದು,ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗಿವೆ. ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಚುನಾವಣೋತ್ತರ ಸಮೀಕ್ಷೆಯನ್ನು ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ , ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.