Sat. Jun 6th, 2026

ಸದನದಲ್ಲಿ ಪ್ರಶ್ನೆಗಳಿದ್ದ ಕಾರಣ ದಾವಣಗೆರೆಗೆ ಹೋಗಿಲ್ಲ: ಸಚಿವ ಜಮೀರ್ ಅಹಮದ್ ಸ್ಪಷ್ಟನೆ

Share this with Friends

ಬೆಂಗಳೂರು:ಸದನದಲ್ಲಿ ನನ್ನ ಇಲಾಖೆಗೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳಿದ್ದ ಕಾರಣದಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಹೋಗಿಲ್ಲ, ಮುಂದಿನ ದಿನಗಳಲ್ಲಿ ದಾವಣಗೆರೆಯಲ್ಲಿ ಅಭ್ಯರ್ಥಿ ಪರವಾಗಿ ಪೂರ್ಣ ಪ್ರಮಾಣದಲ್ಲಿ ಪ್ರಚಾರ ನಡೆಸಿ, ಕಾಂಗ್ರೆಸ್ ಗೆಲುವಿಗೆ ಶ್ರಮಿಸುತ್ತೇನೆ ಎಂದು ವಸತಿ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ದಾವಣಗೆರೆಗೆ ಹೋಗುವಂತೆ ಸೂಚಿಸಿದ್ದರು. ಆದರೆ, ಇಂದು ಸದನದಲ್ಲಿ ನನ್ನ ಇಲಾಖೆಗೆ ಸಂಬಂಧಿಸಿದ ಮೂರು ಪ್ರಮುಖ ಪ್ರಶ್ನೆಗಳಿದ್ದವು. ಶಾಸಕರ ಪ್ರಶ್ನೆಗಳಿಗೆ ಉತ್ತರಿಸುವುದು ನನ್ನ ಕರ್ತವ್ಯವಾದ್ದರಿಂದ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ,” ಎಂದು ತಿಳಿಸಿದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಜಮೀರ್ ಅಹಮದ್ ಗೈರಾಗಿದ್ದಾರೆ ಎಂಬ ವದಂತಿಗಳಿಗೆ ತೆರೆ ಎಳೆದ ಸಚಿವರು, “ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಮುಂದಿನ ದಿನಗಳಲ್ಲಿ ದಾವಣಗೆರೆಯಲ್ಲಿ ಅಭ್ಯರ್ಥಿ ಪರವಾಗಿ ಪೂರ್ಣ ಪ್ರಮಾಣದಲ್ಲಿ ಪ್ರಚಾರ ನಡೆಸಿ, ಕಾಂಗ್ರೆಸ್ ಗೆಲುವಿಗೆ ಶ್ರಮಿಸುತ್ತೇನೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜೀನಾಮೆ ವದಂತಿ ಸುಳ್ಳು: 

 “ನಾನು ಎಲ್ಲಿಯೂ ರಾಜೀನಾಮೆ ನೀಡುತ್ತೇನೆ ಎಂದು ಹೇಳಿಲ್ಲ. ಪಕ್ಷದ ಹೈಕಮಾಂಡ್ ತೆಗೆದುಕೊಂಡ ನಿರ್ಧಾರವೇ ಅಂತಿಮ. ನಾವೆಲ್ಲರೂ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ಒಟ್ಟಾಗಿ ಶ್ರಮಿಸುತ್ತೇವೆ,” “ಕ್ಷೇತ್ರದಲ್ಲಿ ಸಮುದಾಯದ ಬೇಡಿಕೆ ಇರುವುದು ಸಹಜ. ಆದರೆ ಪಕ್ಷವು ಗೆಲುವಿನ ಮಾನದಂಡದ ಮೇಲೆ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದೆ‌. ಮುಂದಿನ ದಿನಗಳಲ್ಲಿ ನಾನು ಖುದ್ದಾಗಿ ದಾವಣಗೆರೆಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದೇನೆ,” ಎಂದು ತಿಳಿಸಿದರು.


Share this with Friends

Related Post