ನವದೆಹಲಿ:ಕರ್ನಾಟಕದ ಜಲಮೂಲಗಳ ರಕ್ಷಣೆ ಹಾಗೂ ನೀರಾವರಿ ಯೋಜನೆಗಳ ಶೀಘ್ರ ಜಾರಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ರಾಜ್ಯ ಸಂಸದರ ಸಭೆಯು ಯಶಸ್ವಿಯಾಗಿದ್ದು, ಒಟ್ಟು 24 ಸಂಸದರು ಭಾಗವಹಿಸಿ ಒಮ್ಮತದ ಬೆಂಬಲ ಸೂಚಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ಇಲ್ಲಿನ ಕರ್ನಾಟಕ ಭವನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಸದರ ಸಭೆಯಲ್ಲಿ, ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಎದುರಾಗಿರುವ ಕಾನೂನು ಮತ್ತು ತಾಂತ್ರಿಕ ಅಡೆತಡೆಗಳನ್ನು ನಿವಾರಿಸಲು ರಾಜ್ಯದ ಸಂಸದರು ಒಗ್ಗಟ್ಟಿನ ಮಂತ್ರ ಜಪಿಸಿದ್ದು, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ತೀರ್ಮಾನಿಸಲಾಯಿತು.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, “ರಾಜ್ಯದ ಹಿತರಕ್ಷಣೆಯ ವಿಷಯದಲ್ಲಿ ನಾವೆಲ್ಲರೂ ಪಕ್ಷಾತೀತವಾಗಿ ಕೆಲಸ ಮಾಡಲು ಸಮ್ಮತಿಸಿದ್ದೇವೆ. ಪ್ರಸ್ತುತ ಕೆಲವು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗಿರುವುದರಿಂದ, ಈ ಸಮಯದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಪ್ರಭಾವ ಬೀರಬಹುದು ಎಂಬ ಸಂಸದರ ಸಲಹೆಯಂತೆ ಪ್ರಧಾನಿ ಭೇಟಿಯನ್ನು ಮುಂದೂಡಲಾಗಿದೆ,” ಎಂದು ತಿಳಿಸಿದರು.
ಯೋಜನೆಗಳ ಸ್ಥಿತಿಗತಿ ಚರ್ಚೆ:
ಮಹದಾಯಿ, ಕೃಷ್ಣಾ ಮೇಲ್ದಂಡೆ, ತುಂಗಭದ್ರಾ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಸ್ತುತ ಸ್ಥಿತಿಗತಿ ಹಾಗೂ ಕೇಂದ್ರ ಮಟ್ಟದಲ್ಲಿ ಬಾಕಿ ಇರುವ ಅನುಮೋದನೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡುವ ಆದೇಶದಂತೆ ಸರ್ಕಾರ ಮುನ್ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಯುಕೆಪಿ-3 ಭೂಸ್ವಾಧೀನಕ್ಕೆ ಚಾಲನೆ:
ಕೃಷ್ಣಾ ಮೇಲ್ದಂಡೆ ಯೋಜನೆ (UKP) ಹಂತ-3ರ ಅಡಿಯಲ್ಲಿ ಸುಮಾರು 1.33 ಲಕ್ಷ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇದಕ್ಕಾಗಿ ಬಜೆಟ್‌ನಲ್ಲಿ ಅಗತ್ಯ ಅನುದಾನ ಮೀಸಲಿಡಲಾಗಿದ್ದು, ರೈತರಿಗೆ ಒಪ್ಪಿತ ಪರಿಹಾರ ನೀಡುವ ಮೂಲಕ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಹೇಳಿದರು.
ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನೂ ಭೇಟಿ ಮಾಡಿ ಮನವಿ ಸಲ್ಲಿಸಲು ಸಂಸದರು ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ.ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಸಂಸದರಾದ ಗೋವಿಂದ ಕಾರಜೋಳ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಂಡಿದ್ದರು. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕವೇ ಈ ಸಭೆಯನ್ನು ನಿಗದಿಪಡಿಸಲಾಗಿತ್ತು ಎಂದು ಡಿಸಿಎಂ ಮಾಹಿತಿ ನೀಡಿದರು.
ಪಕ್ಷಾತೀತ ಬೆಂಬಲ:
“ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪ್ರಗತಿ ಹಾಗೂ ಪ್ರಸ್ತುತ ನಮ್ಮ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಸಂಸದರಿಗೆ ಮನವರಿಕೆ ಮಾಡಿಕೊಡಲಾಗಿದೆ. ಅಗತ್ಯ ದಾಖಲೆಗಳನ್ನು ಅವರಿಗೆ ಒದಗಿಸಲಾಗಿದ್ದು, ರಾಜ್ಯದ ಹಿತದೃಷ್ಟಿಯಿಂದ ನಮ್ಮೊಂದಿಗೆ ನಿಲ್ಲುವುದಾಗಿ ಸಂಸದರು ಭರವಸೆ ನೀಡಿದ್ದಾರೆ,” ಎಂದು ಶಿವಕುಮಾರ್ ಹರ್ಷ ವ್ಯಕ್ತಪಡಿಸಿದರು. ರಾಜ್ಯದ ಕಾನೂನು ತಂಡದೊಂದಿಗೆ ಈಗಾಗಲೇ ಚರ್ಚಿಸಲಾಗಿದ್ದು, ನೀರಾವರಿ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎತ್ತಿನಹೊಳೆ ಯೋಜನೆಗೆ ವೇಗ:
ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಪರಿಸರ ಇಲಾಖೆಯ ಅನುಮತಿ ದೊರೆತಿರುವುದು ಯೋಜನೆಗೆ ದೊಡ್ಡ ಬಲ ತಂದಿದೆ. “ಕಳೆದ ಒಂದು ವರ್ಷದಿಂದ ಈ ಅನುಮತಿಗಾಗಿ ಕಾಯುತ್ತಿದ್ದೆವು. ಪರಿಸರ ಇಲಾಖೆ ವಿಧಿಸಿರುವ ಷರತ್ತುಗಳನ್ನು ಪಾಲಿಸಿ ಕೂಡಲೇ ಬಾಕಿ ಇರುವ ಕಾಮಗಾರಿಯನ್ನು ಪೂರ್ಣಗೊಳಿಸುತ್ತೇವೆ. ದೊಡ್ಡ ಮೊತ್ತದ ದಂಡ ವಿಧಿಸಿರುವ ಬಗ್ಗೆ ತಲೆಕೆಡಿಸಿಕೊಳ್ಳದೆ, ನಮಗೆ ಯೋಜನೆಯನ್ನು ಜನರ ಸಬಲೀಕರಣಕ್ಕಾಗಿ ಜಾರಿಗೊಳಿಸುವುದು ಮುಖ್ಯವಾಗಿದೆ,” ಎಂದು ಅವರು ಸ್ಪಷ್ಟಪಡಿಸಿದರು.

