ನವದೆಹಲಿ,ಮೇ.10: ಬಿಜೆಪಿ ಕರ್ನಾಟಕ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್‌ಐಎ ಬಂಧಿಸಿದೆ
ಮುಸ್ತಫಾ ಪೈಚಾರ್ ಬಂಧಿತ ಆರಪಿ ಯಾಗಿದ್ದು,ಈತನನ್ನು ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಲಾಗಿದೆ.
ಪ್ರಕರಣದ ನಾಲ್ಕನೇ ಆರೋಪಿ ಮುಸ್ತಫಾ ಪೈಚಾರ್ ಕೊಲೆಯ ನಂತರ ತಲೆಮರೆಸಿಕೊಂಡಿದ್ದ, ಆತನನ್ನು ಹಿಡಿಯಲು ಎನ್‌ಐಎ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.
ಈತನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಎನ್‌ಐಎ ಇನ್ಸ್‌ಪೆಕ್ಟರ್ ಷಣ್ಮುಗಂ ನೇತೃತ್ವದ ಹತ್ತು ಮಂದಿ ಬಂಧಿಸಿದ್ದಾರೆ.
ಮುಸ್ತಫಾ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಮತ್ತು ದಕ್ಷಿಣ ಕನ್ನಡದ ಸುಳ್ಯದ ಶಾಂತಿನಗರ ನಿವಾಸಿಯಾಗಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು,2022ರ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದಾಗ ಬೈಕಿನಲ್ಲಿ ಬಂದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.
ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
ಆರಂಭದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು. ಕಳೆದ ವರ್ಷ ಜನವರಿಯಲ್ಲಿ ಎನ್‌ಐಎ 20 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.
ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.