Sat. Nov 14th, 2026

ನಿಖಿಲ್ ಕುಮಾರಸ್ವಾಮಿ ಭೇಟಿ ವೇಳೆ ದೇಗುಲಕ್ಕೆ ಬೀಗ ಹಾಕಿದ ಆರೋಪ; ರಾಮನಗರದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ

Share this with Friends

ರಾಮನಗರ: ತಾಲ್ಲೂಕಿನ ದೊಡ್ಡ ಕುರುಬರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಬಿಸಿಲು ಮಾರಮ್ಮ ದೇವಿಯ ದೇವಸ್ಥಾನದ ಉದ್ಘಾಟನೆ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ದರ್ಶನ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಗ್ರಾಮದಲ್ಲಿ ತೀವ್ರ ರಾಜಕೀಯ ಉದ್ವಿಗ್ನತೆಗೆ ಕಾರಣವಾಗಿದೆ.

ಶುಕ್ರವಾರ (ನವೆಂಬರ್ 13) ಮಧ್ಯಾಹ್ನ 3 ಗಂಟೆ ಸುಮಾರಿಗೆ ದೇಗುಲದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿಖಿಲ್ ಕುಮಾರಸ್ವಾಮಿ ಗ್ರಾಮಕ್ಕೆ ಆಗಮಿಸಿದ್ದರು. ಅವರು ದೇಗುಲದತ್ತ ಬರುತ್ತಿರುವುದನ್ನು ಮೈಕ್‌ನಲ್ಲಿ ಘೋಷಿಸುತ್ತಿದ್ದಂತೆಯೇ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬಾತ ಉದ್ದೇಶಪೂರ್ವಕವಾಗಿ ದೇವಾಲಯದ ಬಾಗಿಲಿಗೆ ಬೀಗ ಹಾಕಿಕೊಂಡು ಹೋಗಿದ್ದಾನೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ರಾಮು ಆರೋಪಿಸಿದ್ದಾರೆ. ಸುಮಾರು 45 ನಿಮಿಷಗಳ ಕಾಲ ಕಾದರೂ ಬೀಗ ತೆಗೆಯದ ಕಾರಣ ನಿಖಿಲ್ ಕುಮಾರಸ್ವಾಮಿ ದರ್ಶನ ಪಡೆಯದೆ ನಿರ್ಗಮಿಸಿದ್ದಾರೆ.

ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್:

ತಮ್ಮ ನಾಯಕನಿಗೆ ಅವಮಾನ ಮಾಡಲಾಗಿದೆ ಎಂದು ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ದೇಗುಲದ ಎದುರು ಪ್ರತಿಭಟನೆ ನಡೆಸಿದಾಗ, ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿಗರ ನಡುವೆ ತೀವ್ರ ವಾಗ್ವಾದ ನಡೆದು ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಎರಡೂ ಗುಂಪುಗಳನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ರಾಮನಗರದ ಜನತೆ ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ: ಎಚ್‌ಡಿಕೆ ಆಕ್ರೋಶ

ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, “ಚೀಲೂರು ಪಂಚಾಯಿತಿ ವ್ಯಾಪ್ತಿಯ ದೊಡ್ಡ ಕುರುಬರಹಳ್ಳಿ ಗ್ರಾಮದ ಜನರು ಮೊದಲಿನಿಂದಲೂ ನಮಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಆಹ್ವಾನದ ಮೇರೆಗೆ ದೇಗುಲಕ್ಕೆ ತೆರಳಿದ್ದ ನಿಖಿಲ್ ಅವರಿಗೆ ಪ್ರವೇಶ ನಿರಾಕರಿಸಿರುವುದು ಕಾಂಗ್ರೆಸ್ ಕಾರ್ಯಕರ್ತರ ದಬ್ಬಾಳಿಕೆ ಮತ್ತು ರೌಡಿತನಕ್ಕೆ ಸಾಕ್ಷಿಯಾಗಿದೆ. ರಾಮನಗರದ ಜನತೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

 

 

 


Share this with Friends

Related Post