ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ಸಾಂ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ನಿಯೋಗವು, ಇಂದು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ದೂರು ಸಲ್ಲಿಸಿದೆ.
ರಾಷ್ಟ್ರೀಯ ಏಕತೆಗೆ ಧಕ್ಕೆ ತರುವ ಮತ್ತು ಸಮುದಾಯಗಳ ನಡುವೆ ವೈಷಮ್ಯ ಮೂಡಿಸುವ ರೀತಿಯಲ್ಲಿ ಖರ್ಗೆ ಅವರು ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುತ್ತವೆ, ಆದ್ದರಿಂದ ಅವರನ್ನು ಕೂಡಲೇ ಬಂಧಿಸಬೇಕು ಎಂದು ನಿಯೋಗವು ಮನವಿಯಲ್ಲಿ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಾಯಕರು, “ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಅತ್ಯುನ್ನತ ರಾಜಕೀಯ ಸ್ಥಾನದಲ್ಲಿದ್ದುಕೊಂಡು ಜವಾಬ್ದಾರಿಯನ್ನೇ ಮರೆತಿದ್ದಾರೆ. ಅಸ್ಸಾಂನಲ್ಲಿ ಅವರು ನೀಡಿದ ಹೇಳಿಕೆಗಳು ಕೇವಲ ರಾಜಕೀಯ ಟೀಕೆಗಳಲ್ಲ, ಬದಲಾಗಿ ವಿವಿಧ ಸಮುದಾಯಗಳ ನಡುವೆ ದ್ವೇಷದ ಬೀಜ ಬಿತ್ತುವ ಮತ್ತು ರಾಷ್ಟ್ರೀಯ ಏಕತೆಗೆ ಧಕ್ಕೆ ತರುವಂತಹ ಪ್ರಚೋದನಾಕಾರಿ ಮಾತುಗಳಾಗಿವೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಾಂಗ್ರೆಸ್ ಹವಣಿಸುತ್ತಿದೆ” ಎಂದು ಕಿಡಿಕಾರಿದರು.
“ಇಂತಹ ಹೇಳಿಕೆಗಳು ದೇಶದ ಆಂತರಿಕ ಭದ್ರತೆಗೆ ಮತ್ತು ಸಾಮುದಾಯಿಕ ಸೌಹಾರ್ದತೆಗೆ ದೊಡ್ಡ ಕುತ್ತು ತರುತ್ತವೆ. ಕಾನೂನಿನ ಚೌಕಟ್ಟನ್ನು ಮೀರಿ ಮಾತನಾಡಿರುವ ಖರ್ಗೆ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು” ಎಂದು ದೂರುದಾರರ ನಿಯೋಗವು ಈ ಸಂದರ್ಭದಲ್ಲಿ ಬಲವಾಗಿ ಒತ್ತಾಯಿಸಿತು. ಕಾಂಗ್ರೆಸ್ ಪಕ್ಷವು ಪದೇ ಪದೇ ರಾಷ್ಟ್ರ ವಿರೋಧಿ ಧೋರಣೆಯನ್ನು ಪ್ರದರ್ಶಿಸುತ್ತಿದೆ ಎಂದು ನಿಯೋಗವು ಆರೋಪಿಸಿತು.
ದೂರು ಸಲ್ಲಿಸಿದ ಈ ನಿಯೋಗದಲ್ಲಿ ಶಾಸಕರಾದ ಎಸ್. ಮುನಿರಾಜು, ಸಿ. ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ರಾಜ್ಯ ವಕ್ತಾರ ಪ್ರಕಾಶ್ ಎಸ್. ಹಾಗೂ ಪಕ್ಷದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

