Sat. Jan 4th, 2025

ಏ.19 ರಿಂದ 21ರವರೆಗೆ ಅಂಚೆ ಮತದಾನ

Share this with Friends

ಚಾಮರಾಜನಗರ, ಏ.13: ಲೋಕಸಭಾ ಚುನಾವಣೆ ಸಂಬಂಧ ಅಗತ್ಯ ಸೇವೆಗಳಡಿ ಮತದಾರರಿಗೆ ಅಂಚೆ ಮತದಾನ ಮಾಡಲು ಏಪ್ರಿಲ್ 19 ರಿಂದ 21ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಅಂಚೆ ಮತದಾನ ಕೇಂದ್ರವನ್ನು ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ ಸಭಾಂಗಣದ ಕೊಠಡಿ ಸಂಖ್ಯೆ 6 ರಲ್ಲಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.

85 ವರ್ಷದ ನಾಗರಿಕರು, ವಿಶೇಷಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮತದಾರು ಹಾಗೂ ವಿಶೇಷಚೇತನ ಮತದಾರರಿಗೆ ಏಪ್ರಿಲ್ 13ರಿಂದ 18ರವರೆಗೆ ಅಂಚೆ ಮತಪತ್ರದ ಮೂಲಕ ಮನೆಯಲ್ಲಿಯೇ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಸಂಬಂಧ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಎಲ್ಲಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷದ ಅಭ್ಯರ್ಥಿಗಳು, ಪ್ರತಿನಿಧಿಗಳೊಂದಿಗೆ ನಡೆದ ಸಿದ್ದತಾ ಸಭೆಯಲ್ಲಿ ಅವರು ತಿಳಿಸಿದರು.

ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಹೆಚ್.ಡಿ. ಕೋಟೆ, ನಂಜನಗೂಡು, ವರುಣ, ಟಿ. ನರಸೀಪುರ, ಹನೂರು, ಕೊಳ್ಳೇಗಾಲ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 26019 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 25589 ವಿಶೇಷಚೇತನರನ್ನು ಗುರುತಿಸಲಾಗಿದೆ. ಈ ಪೈಕಿ 982 ಹಿರಿಯ ನಾಗರಿಕರು ಹಾಗೂ 445 ವಿಶೇಷಚೇತನ ಮತದಾರರು ಮನೆಯಲ್ಲಿ ಮತದಾನ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಉಳಿದವರು ಮತಗಟ್ಟೆಗೆ ಬಂದು ಮತ ಚಲಾಯಿಸಲಿದ್ದಾರೆ ಎಂದು ತಿಳಿಸಿದರು.

ಅಪರ ಜಿಲ್ಲಾ ಚುನಾವಣಾಧಿಕಾರಿ ಗೀತಾ ಹುಡೇದ, ಎಂಟು ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಪಕ್ಷೇತರ ಅಭ್ಯರ್ಥಿಗಳಾದ ಜಿ.ಡಿ. ರಾಜಗೋಪಾಲ, ಎಚ್.ಕೆ. ಸ್ವಾಮಿ, ವಿವಿಧ ರಾಜಕೀಯ ಪಕ್ಷಗಳ ಚುನಾವಣಾ ಏಜೆಂಟರು ಸಭೆಯಲ್ಲಿ ಉಪಸ್ಥಿತರಿದ್ದರು.


Share this with Friends

Related Post