ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಸಂಘರ್ಷದ ಬಿಸಿ ಭಾರತದ ಅಡುಗೆ ಮನೆಯ ಮೇಲೆ ತಟ್ಟದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ವಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಸಿಎಸ್ (CCS) ಸಭೆಯಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ಹಾಗೂ ಇಂಧನ ಪೂರೈಕೆಯ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.
ಜಾಗತಿಕ ಮಟ್ಟದಲ್ಲಿ ತೈಲ ಮತ್ತು ಅನಿಲ ಮಾರುಕಟ್ಟೆಯಲ್ಲಿ ಏರುಪೇರಾಗುವ ಸಾಧ್ಯತೆ ಇರುವುದರಿಂದ, ದೇಶದಲ್ಲಿ ಅಡುಗೆ ಅನಿಲದ ದಾಸ್ತಾನು ಮತ್ತು ಪೂರೈಕೆ ಸರಪಳಿ ಮೇಲೆ ನಿರಂತರ ನಿಗಾ ಇಡಲು ಪ್ರಧಾನಿ ಸೂಚಿಸಿದ್ದಾರೆ. ಜನಸಾಮಾನ್ಯರಿಗೆ ಸಿಲಿಂಡರ್ ಲಭ್ಯತೆಯಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಸಭೆಯಲ್ಲಿ ತಿಳಿಸಿದರು.
ಕಾಳಸಂತೆ ತಡೆಗೆ ಹದ್ದಿನ ಕಣ್ಣು:
ಯುದ್ಧದ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಅಡುಗೆ ಅನಿಲದ ಕೃತಕ ಅಭಾವ ಸೃಷ್ಟಿಸುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಸರ್ಕಾರ ಸನ್ನದ್ಧವಾಗಿದ್ದು,ಇಂತಹ ಅಕ್ರಮಗಳ ಮೇಲೆ ನಿಗಾ ಇಡಲು ಮತ್ತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳ ಜೊತೆ ಸಮನ್ವಯ ಸಾಧಿಸುವಂತೆ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಇಂಧನ ಭದ್ರತೆಗೆ ಒತ್ತು:
ಕೇವಲ ಸಿಲಿಂಡರ್ ಮಾತ್ರವಲ್ಲದೆ, ಪೆಟ್ರೋಲ್, ಡೀಸೆಲ್ ಮತ್ತು ಕಲ್ಲಿದ್ದಲು ಪೂರೈಕೆಯಲ್ಲೂ ವ್ಯತ್ಯಯವಾಗದಂತೆ ದೀರ್ಘಾವಧಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಆಮದು ಮೂಲಗಳನ್ನು ವೈವಿಧ್ಯಗೊಳಿಸುವ ಮೂಲಕ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ಸೂಚಿಸಿದ್ದಾರೆ.
ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಕ್ರಮ;
ಸಭೆಯಲ್ಲಿ ಮುಖ್ಯವಾಗಿ ರೈತರ ಹಿತಾಸಕ್ತಿಯ ಬಗ್ಗೆ ಚರ್ಚಿಸಲಾಯಿತು. ಮುಂಬರುವ ಮುಂಗಾರು ಹಂಗಾಮಿಗೆ ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಲು ಪ್ರಧಾನಿ ಅಧಿಕಾರಿಗಳಿಗೆ ಸೂಚಿಸಿದರು. ಸಂಘರ್ಷ ಪೀಡಿತ ಪ್ರದೇಶಗಳ ಹೊರತಾಗಿ, ರಸಗೊಬ್ಬರ ಆಮದು ಮಾಡಿಕೊಳ್ಳಲು ಪರ್ಯಾಯ ಮೂಲಗಳನ್ನು ಗುರುತಿಸುವಂತೆ ಅವರು ತಿಳಿಸಿದ್ದಾರೆ.
ವಿದ್ಯುತ್ ಮತ್ತು ಇಂಧನ ಭದ್ರತೆ:
ದೇಶದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ತಡೆಯಲು ವಿದ್ಯುತ್ ಸ್ಥಾವರಗಳಲ್ಲಿ ಸಾಕಷ್ಟು ಪ್ರಮಾಣದ ಕಲ್ಲಿದ್ದಲು ದಾಸ್ತಾನು ಇರುವುದನ್ನು ಸಭೆ ಖಚಿತಪಡಿಸಿಕೊಂಡಿದೆ. ಇಂಧನ ಮತ್ತು ಅನಿಲ ಪೂರೈಕೆಯಲ್ಲಿ ಅಡೆತಡೆಗಳಾಗದಂತೆ ದೀರ್ಘಾವಧಿಯ ಯೋಜನೆಗಳನ್ನು ರೂಪಿಸಲು ನಿರ್ಧರಿಸಲಾಯಿತು.
ರಫ್ತು-ಆಮದು ವೈವಿಧ್ಯೀಕರಣ:
ಔಷಧ ಮತ್ತು ರಾಸಾಯನಿಕ ವಲಯದ ಮೇಲೆ ಸಂಘರ್ಷದ ಪ್ರಭಾವ ಬೀರದಂತೆ ಎಚ್ಚರ ವಹಿಸಲು ಸೂಚಿಸಿದ್ದು, ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಭಾರತೀಯ ಉತ್ಪನ್ನಗಳಿಗೆ ಹೊಸ ರಫ್ತು ಮಾರುಕಟ್ಟೆಗಳನ್ನು ಹುಡುಕುವ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿದ್ದಾರೆ.
“ಪಶ್ಚಿಮ ಏಷ್ಯಾದ ಪರಿಸ್ಥಿತಿಯಿಂದ ನಮ್ಮ ನಾಗರಿಕರ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರದಂತೆ ನೋಡಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಸಭೆಯ ನಂತರ ಪ್ರಧಾನಿ ಭರವಸೆ ನೀಡಿದ್ದಾರೆ

